ಮಳೆ ಹಾನಿ ಸರ್ವೇ ಕಾರ್ಯ ಸಮರ್ಪಕವಾಗಿ ನಡೆಸಿ

05rajesh3
Published on

ಕೊಳ್ಳೇಗಾಲ: ತಾಲೂಕಿನ ಪ್ರವಾಹ ಸಮಸ್ಯೆಯ ಗ್ರಾಮಗಳಲ್ಲಿ ಇತ್ತೀಚಿನ ಪ್ರವಾಹದಿಂದ ಉಂಟಾದ ಬೆಳೆ ಹಾಗೂ ಮನೆ ಹಾನಿ ಕುರಿತು ನಿಖರವಾಗಿ ಸರ್ವೇ ಕಾರ್ಯ ಕೈಗೊಂಡು ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್ ಸೂಚನೆ ನೀಡಿದರು.


ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು. ಕೊಳ್ಳೇಗಾಲ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇತ್ತೀಚೆಗೆ ಪ್ರವಾಹದಿಂದ ಜಮೀನುಗಳಿಗೆ ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿರುವ ಕುರಿತು ನಿಖರವಾಗಿ ಸರ್ವೇ ಮಾಡಬೇಕು. ಎಷ್ಟು ಪ್ರಮಾಣದಲ್ಲಿ ಬೆಳೆ ನಾಶವಾಗಿದೆ, ಎಷ್ಟು ಮನೆಗಳಿಗೆ ಹಾನಿಯಾಗಿದೆ ಎಂಬ ಬಗ್ಗೆ ಸಮರ್ಪಕವಾಗಿ ಸರ್ವೇ ನಡೆಸಬೇಕು. ಯಾವುದೇ ಹಾನಿ ಸಂಭವಿಸಿದ್ದರೂ ಸಮಗ್ರವಾಗಿ ಪರಿಶೀಲಿಸಿ ವರದಿ ಮಾಡಬೇಕು ಎಂದು ನಿರ್ದೇಶನ ನೀಡಿದರು.


ಪ್ರವಾಹ ಪೀಡಿತವಾಗಿದ್ದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಕಲುಷಿತ ಅಂಶಗಳಿಂದ ಹೊರತಾದ ನೀರು ಸರಬರಾಜಾಗುತ್ತಿದೆಯೇ ಎಂಬ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ನೀರು ಪರೀಕ್ಷೆ ವರದಿ ಪಡೆದುಕೊಳ್ಳಬೇಕು. ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ರೋಗ ರುಜಿನಗಳಿಗೆ ಆಸ್ಪದವಾಗದಂತೆ ನೈರ್ಮಲ್ಯ ಕಾಪಾಡಬೇಕು ಎಂದು ಹೇಳಿದರು.


ಪ್ರವಾಹ ಸಂತ್ರಸ್ತ ಗ್ರಾಮಗಳಲ್ಲಿ ಕೈಗೊಂಡ ಕ್ರಮಗಳು, ಕಾಳಜಿ ಕೇಂದ್ರಗಳ ನಿರ್ವಹಣೆ, ಜನರ ಸ್ಥಳಾಂತರ ಇನ್ನಿತರ ವಿವರಗಳನ್ನು ನೀಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು, ಪ್ರವಾಹ ತಡೆಗಾಗಿ ಶಾಶ್ವತ ಪರಿಹಾರ ಕೈಗೊಳ್ಳಲು ಜನರು ಬಯಸಿದ್ದಾರೆ. ಪ್ರವಾಹ ತಡೆಯಲು ತಡೆಗೋಡೆ ನಿರ್ಮಾಣಕ್ಕಾಗಿ 150 ಕೋಟಿ ರೂ.ವೆಚ್ಚದಲ್ಲಿ ಅಂದಾಜು ಪಟ್ಟಿ ಸಿದ್ಧಪಡಿಸಿದ್ದು, ಸಚಿವರ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್ ಮಾತನಾಡಿ, ಪ್ರವಾಹ ಸಂದರ್ಭದಲ್ಲಿ ಜಿಲ್ಲೆಯ ಅಧಿಕಾರಿಗಳ ತಂಡ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ವಿಪತ್ತು ನಿರ್ವಹಣಾ ಸಮಯದಲ್ಲಿ ತಂಡವಾಗಿ ಇದೇ ರೀತಿ ಪ್ರತಿಯೊಂದು ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ. ಜನರಿಗೆ ಸ್ಪಂದಿಸಿ ನೆರವಾಗಿ ಎಂದು ತಿಳಿಸಿದರು.


ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ವಯನಾಡು ಗುಡ್ಡಕುಸಿತ ಪ್ರಕರಣದಲ್ಲಿ ಜಿಲ್ಲಾಡಳಿತ ತ್ವರಿತವಾಗಿ ಸ್ಪಂದಿಸಿದೆ. ಜಿಲ್ಲೆಯಲ್ಲಿ ಸಹಾಯವಾಣಿ ತೆರೆದು ಬೇರೆ ಬೇರೆ ಭಾಗಗಳಿಂದ ಬಂದ ಕರೆಗಳನ್ನು ಸ್ವೀಕರಿಸಿ ಅವರ ನೆರವಿಗೆ ಮುಂದಾಗಿದ್ದೇವೆ. ಜಿಲ್ಲೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ವೈದ್ಯರ ತಂಡವನ್ನು ವಯನಾಡಿಗೆ ಕಳುಹಿಸಲಾಗಿತ್ತು. ಇಲ್ಲಿನ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿ ಸಂತ್ರಸ್ತರಿಗೆ ಸಹಾಯ ಮಾಡಿದ್ದಾರೆ ಎಂದು ವಿವರಿಸಿದರು.


ಸಭೆಗೂ ಮೊದಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪ್ರವಾಹ ಸಮಸ್ಯೆಯ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಉಪವಿಭಾಗಾಧಿಕಾರಿ ಮಹೇಶ್, ಜಂಟಿ ಕೃಷಿ ನಿರ್ದೇಶಕ ಆಬೀದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಎಂ.ವಿ.ಸುಧಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net