

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಅಲ್ಲದೆ, ಮೂರು ತಿಂಗಳ ಅವಧಿಯಲ್ಲಿ ಉತ್ತಮ ಮಳೆಯಾಗಿದ್ದ ಕಾರಣ, ರಾಜ್ಯಾದ್ಯಂತ ಬಹುತೇಕ ಕೆರೆಗಳು ಭರ್ತಿಗೊಂಡಿವೆ. ಇದರಿಂದ, ಗಣೇಶ ಮೂರ್ತಿ ವಿಸರ್ಜನೆಗೆ ಅನುಕೂಲವಾಗಿದೆ. ಹಬ್ಬದ ಸಂದರ್ಭದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ ಕೆರೆಗಳಿಗೆ ಇನ್ನಷ್ಟು ನೀರು ಹರಿದು ಬರಲಿದ್ದು, ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮುಡಿಗೊಳಿಸಲಿದೆ.
ಕರಾವಳಿ ಮತ್ತು ಉತ್ತರ ಕರ್ನಾಟಕ ಕೆಲ ಪ್ರದೇಶಗಳಲ್ಲಿ ಸೋಮವಾರ ಸಾಧಾರಣವಾಗಿ ಮಳೆ ಬಿದ್ದಿತ್ತು. ಇತರ ಭಾಗಗಲ್ಲಿ ಮಾನ್ಸೂನ್ ದುರ್ಬಲವಾಗಿತ್ತು.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.27ರಿಂದ ಆ.31ರವರೆಗೆ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಆ.28ರಿಂದ ಮುಂದಿನ 2 ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಕೊಡಗಿನಲ್ಲಿ ಆ.29ರಂದು ಮತ್ತು ಯಾದಗಿರಿಯಲ್ಲಿ ಆ.28ರಂದು ಯೆಲ್ಲೋ ಅಲರ್ಟ್ ಇರಲಿದೆ.
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮತ್ತು ವಿಜಯಪುರದಲ್ಲಿ ಮುಂದಿನ 4 ದಿನ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.