2 ದಿನ ದಕ್ಷಿಣ ಕರ್ನಾಟಕದಲ್ಲಿ ಮಳೆ: ಹವಾಮಾನ ಇಲಾಖೆ ಮಾಹಿತಿ

Rains
Published on

ಬೆಂಗಳೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ, ಮುಂದಿನ 2 ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಬೆಂಗಳೂರು ನಗರ ಸೇರಿ ದಕ್ಷಿಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಭಾನುವಾರ ಮುಂಜಾನೆಯಿಂದ ಮೋಡ ಕವಿದ ವಾತಾವರಣದೊಂದಿಗೆ ಜಿಟಿಜಿಟಿ ಮಳೆಯಾಯಿತು. ಕೆಲ ಜಿಲ್ಲೆಗಳಲ್ಲಿ ಕನಿಷ್ಠ, ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶ ಕುಸಿತವಾಗಿ ಥಂಡಿ ವಾತಾವರಣ ಉಂಟಾಯಿತು.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ಜ.20ರಂದು ಹಾಗೂ ದಕ್ಷಿಣ ಕನ್ನಡದಲ್ಲಿ ಮುಂದಿನ 48 ಗಂಟೆಗೆ ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕರಾವಳಿ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಬೆಳಗ್ಗಿನ ಜಾವ ದಟ್ಟ ಮಂಜು ಬೀಳಲಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ.

ಬಂಗಾಳಕೊಲ್ಲಿಯಲ್ಲಿ ತೇವಾಂಶ ಭರಿತ ಮೋಡ, ವಾಯುಭಾರ ಕುಸಿತದಿಂದ ಹವಾಮಾನದಲ್ಲಿ ದಿಢೀರ್​ ಬದಲಾವಣೆಯಾಗಿದೆ. ಸೋಮವಾದವರೆಗೆ ಮಾತ್ರ ಮಳೆ ಇರಲಿದೆ. ಮಂಗಳವಾರದಿಂದ ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ.

| ಸಿ.ಎಸ್​.ಪಾಟೀಲ್​, ಹವಾಮಾನ ಇಲಾಖೆ ನಿರ್ದೇಶಕ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net