

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ, ಮುಂದಿನ 4 ದಿನ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಬೆಂಗಳೂರು, ಬೆಂ.ಗ್ರಾಮಾಂತರದ ದೊಡ್ಡಬಳ್ಳಾಪುರ, ಚಿತ್ರದುರ್ಗದ ಹಿರಿಯೂರು, ದಾವಣಗೆರೆ, ಕೊಪ್ಪಳದ ಗಂಗಾವತಿ, ಮಂಡ್ಯ, ಶಿವಮೊಗ್ಗದ ಆಗುಂಬೆ,ಮಡಿಕೇರಿಯ ನಾಗಮಂಡಲ,ಯಾದಗಿರಿ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ವರ್ಷಧಾರೆಯಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿಯಲ್ಲಿ ಮುಂದಿನ 4 ದಿನ ಹಾಗೂ ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಅ.20ರಂದು ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್ ಕೊಟ್ಟಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅ.20ರಂದು ಮತ್ತು ಚಿಕ್ಕಬಳ್ಳಾಪುರದಲ್ಲಿಯೂ ಅ.21ರಂದು ಭಾರಿ ಮಳೆ ಬೀಳುವುದರಿಂದ ಯೆಲ್ಲೋ ಅರ್ಲಟ್ ಇರಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ರಾಮನಗರ, ಚಾಮರಾಜನಗರ ಮತ್ತು ವಿಜಯನಗರದಲ್ಲಿ ಮುಂದಿನ 3 ದಿನ ಗುಡುಗು ಸಹಿತ ವರ್ಷಧಾರೆಯಾಗಲಿದೆ.
ಕರಾವಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40-45 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅ.24ರವರೆಗೆ ಗುಡುಗು ಸಹಿತ ವ್ಯಾಪಕ ಮಳೆ ಸುರಿಯಲಿದೆ. ಬರುವ ದಿನಗಳಲ್ಲಿ ಇನ್ನಷ್ಟು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಕೃಷಿ ಮೇಲೆ ಹೆಚ್ಚು ಪರಿಣಾಮ ಬೀರಬಹುದು.
| ಸಿ.ಎಸ್.ಪಾಟೀಲ್, ಹವಾಮಾನ ಇಲಾಖೆ ನಿರ್ದೇಶಕ.