ಗುಡುಗು, ಸಿಡಿಲಿನ ಎಚ್ಚರವಿರಲಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸಲಹೆ

Dc Dr.H.N.Gopal Krishna
Published on

ಮಂಡ್ಯ: ಪೂರ್ವ ಮುಂಗಾರು ಮಳೆಯ ಆರ್ಭಟ ಜೋರಾಗುವ ಸಾಧ್ಯತೆ ಇದೆ. ಆದ್ದರಿಂದ ಈ ಅವಧಿಯಲ್ಲಿ ಗುಡುಗು, ಸಿಡಿಲಿನ ಅಬ್ಬರ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವುದರ ಜತೆಗೆ ಕೆಲ ಸೂಚನೆಗಳನ್ನು ತಪ್ಪದೇ ಪಾಲಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮನವಿ ಮಾಡಿದ್ದಾರೆ.

ಪ್ರತಿಕೂಲ ಹವಾಮಾನದ ಸಮಯದಲ್ಲಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದನ್ನು ಆದಷ್ಟು ತಪ್ಪಿಸಬೇಕಿದೆ. ಗುಡುಗು ಮತ್ತು ಸಿಡಿಲಿನ ಸಂದರ್ಭದಲ್ಲಿ ಲೋಹದ ತಡಗನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಆದ್ದರಿಂದ ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ನಿಲ್ಲಿಸಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಬಳಸಬೇಡಿ. ಅಂತೆಯೇ ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು ಎಂದು ಸಲಹೆ ನೀಡಿದ್ದಾರೆ.

ಮಕ್ಕಳು, ವಯೋವೃದ್ಯರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಸಿಡಿಲು ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ಉಪಯೋಗಿಸಬಾರದು. ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net