

ಬೆಂಗಳೂರು: ರಾಜ್ಯದ ಅರ್ಧ ಭಾಗದಲ್ಲಿ ಒಣಹವೆ ಮುಂದುವರಿದರೆ, ಇನ್ನೂ ಅರ್ಧ ಭಾಗದ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಏ.23ರಿಂದ ಏ.29ರವರೆಗೆ ಬಿರುಗಾಳಿ ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು ವಿಜಯನಗರ ವ್ಯಾಪ್ತಿಯ ಆಯ್ದ ಸ್ಥಳಗಳಲ್ಲಿ ಏ.23ರಂದು ಹಾಗೂ ಬೆಂಗಳೂರು ನಗರ, ಬೆಂ. ಗ್ರಾಮಾಂತರದಲ್ಲಿ ಏ.25ರಿಂದ ಮುಂದಿನ 4 ದಿನ ಹಗುರದಿಂದ ಕೂಡಿದ ಮಳೆಯಾಗಲಿದೆ.
ಉತ್ತರ ಕರ್ನಾಟಕದಲ್ಲಿ ಒಣಹವೆ:
ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಸಾಧಾರಣ ಮಳೆ ಬೀಳುವ ಮೂನ್ಸೂಚನೆ ಇದ್ದರೂ ಒಣಹವೆ ಇರಲಿದೆ. ಆ ಭಾಗದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ 2-3 ಡಿ.ಸೆ. ಅಧಿಕವಾಗಿದೆ. ಮುಂದಿನ 5 ದಿನಗಳ ಇದೇ ವಾತಾವರಣ ಇರಲಿದೆ. ಕಲಬುರಗಿ, ಬೀದರ್, ರಾಯಚೂರು ಮತ್ತು ವಿಜಯಪುರದಲ್ಲಿ ಮಂಗಳವಾರ 40 ಡಿ.ಸೆ.ಉಷ್ಣಾಂಶ ದಾಟಿದೆ. ದಕ್ಷಿಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ವಾಡಿಕೆಯಂತೆ ಉಷ್ಣಾಂಶ ದಾಖಲಾಗುತ್ತಿದೆ. ಮುಂದಿನ 2 ದಿನ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ಮತ್ತು 23 ಡಿ.ಸೆ. ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.