ನರೇಗಾ ಯೋಜನೆಯಡಿ ಕೆಲಸ ಕೊಡಿ: ಕೃಷಿ ಕೂಲಿಕಾರರ ಸಂಘದಿಂದ ಪ್ರತಿಭಟನಾ ಮೆರವಣಿಗೆ

2
Published on

ಮಂಡ್ಯ: ನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಬಳಿಕ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಅವರಿಗೆ ಮನವಿ ಸಲ್ಲಿಸಿದರು. ನರೇಗಾ ಯೋಜನೆಯಡಿ ಕೆಲಸ ಮಾಡಿರುವವರಿಗೆ ಬಾಕಿ ವೇತನ ಪಾವತಿಸಬೇಕು. 94ಸಿ ಅಡಿಯಲ್ಲಿ ಹಕ್ಕುಪತ್ರ ಹಾಗೂ ನಿವೇಶನ ರಹಿತರಿಗೆ ವಸತಿ, ಬ್ಯಾಂಕ್ ಸಾಲ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾದ್ಯಂತ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳು ಸಮರ್ಪಕವಾಗಿ ಜಾರಿಯಾಗದೆ ಫಲಾನುಭವಿಗಳು ಕಚೇರಿಗಳಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಂತೆಯೇ ಬಹುತೇಕ ಗ್ರಾಮಗಳಲ್ಲಿ ಸ್ಮಶಾನ ಸೌಲಭ್ಯ ಇರುವುದಿಲ್ಲ, ಬಹುತೇಕ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಆದ್ದರಿಂದ ಹಳ್ಳಿಗೊಂದು ಸ್ಮಶಾನ ನಿರ್ಮಿಸಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದರು

ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ಮಾತನಾಡಿ, ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಕೆಲಸಕ್ಕಾಗಿ 80ಕ್ಕೂ ಹೆಚ್ಚಿನ ಗ್ರಾಪಂಗಳಲ್ಲಿ ಕೂಲಿಕಾರರನ್ನು ಸೇರಿಸಿ 500ಕ್ಕೂ ಹೆಚ್ಚು ಕಾಯಕ ಸಂಘಗಳನ್ನು ರಚಿಸಿ 10 ಸಾವಿರಕ್ಕೂ ಹೆಚ್ಚಿನ ಕೂಲಿಕಾರ್ಮಿಕರಿಗೆ ನಮ್ಮ ಸಂಘವು ಕೆಲಸ ಕೊಡಿಸುವಲ್ಲಿ ಯಶಸ್ವಿಯಾಗಿದೆ. ನಿವೇಶನ ರಹಿತರ ಮತ್ತು ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವವರನ್ನು ಸಂಘಟಿಸಿ ಅರ್ಜಿ ಹಾಕಿಸಲಾಗಿದೆ. ಬಡವರು ಆರ್ಥಿಕವಾಗಿ ಪ್ರಬಲಗೊಳ್ಳಲು ಬ್ಯಾಂಕ್ ಸಾಲ ಕೊಡಿಸಲು ಅರ್ಜಿ ಸಲ್ಲಿಸಲಾಗಿದೆ. ಸಮಸ್ಯೆಗಳ ಇತ್ಯರ್ಥಕ್ಕಾಗಿ ಇವರೆಲ್ಲ ಕಾಯುತ್ತಿದ್ದಾರೆ. ಆದ್ದರಿಂದ ಜಿಪಂ ಸಿಇಒ ಕೃಷಿ ಕೂಲಿಕಾರರ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್, ಮಳವಳ್ಳಿ ತಾಲೂಕು ಅಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ, ಕಾರ್ಯದರ್ಶಿ ಸರೋಜಮ್ಮ, ಮದ್ದೂರು ತಾಲೂಕು ಅಧ್ಯಕ್ಷೆ ಅನಿತಾ, ಕಾರ್ಯದರ್ಶಿ ಅರುಣ್‌ಕುಮಾರ್, ರಾಜು, ಬಿ.ಎ.ಮಧುಕುಮಾರ್, ಶುಭವತಿ, ರಾಮಯ್ಯ, ಟಿ.ಎಚ್.ಆನಂದ್, ಮಹಾದೇವ ಮಾರಯ್ಯ, ನಾಗರತ್ನ, ನಾಗಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net