

ರಾಜಾಜಿನಗರ : ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎನ್.ವೆಂಕಟೇಶ್ ಮತ್ತು ಸಮಿತಿ ಸದಸ್ಯರು ಕ್ಷೇತ್ರವ್ಯಾಪ್ತಿಯ ಪ್ರಕಾಶನಗರ ಆಹಾರ ಮತ್ತು ನಾಗರಿಕ ಸರಬರಾಜು ದಿನಸಿ ಮಳಿಗೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ವೆಂಕಟೇಶ್, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ಪ್ರತಿ ಕುಟುಂಬಗಳಿಗೆ ತಲುಪಿಸುವುದಕ್ಕಾಗಿ ಕ್ಷೇತ್ರದ ವ್ಯಾಪ್ತಿಗೆ ಬರುವ ಆಹಾರ ಇಲಾಖೆಯ ದಿನಸಿ ಮಳಿಗೆಗಳಿಗೆ ಭೇಟಿ ನೀಡಲಾಗುತ್ತಿದೆ. ಸರ್ಕಾರ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿ ಸಮರ್ಪಕವಾಗಿ ಲಾನುಭವಿಗಳಿಗೆ ತಲುಪಬೇಕು, ತೂಕದಲ್ಲಿ ನಾಗರಿಕರಿಗೆ ಮೋಸವಾಗದಂತೆ ನೋಡಿಕೊಳ್ಳುವುದು ಸಮಿತಿಯ ಉದ್ದೇಶ. ಆಹಾರ ಮತ್ತು ನಾಗರಿಕ ಪೂರೈಕೆ ಮಳಿಗೆಗಳಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಸಮಸ್ಯೆಗಳು ಇದ್ದಲ್ಲಿ ನಮ್ಮ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ದೂರು ಸಲ್ಲಿಸಬಹುದು ಎಂದು ಸಾರ್ವಜನಿಕರಿಗೆ ಕರೆ ವೆಂಕಟೇಶ್ ಕರೆ ನೀಡಿದರು.
ಗ್ಯಾರೆಂಟಿ ಯೋಜನೆಯು ಸಮರ್ಪಕವಾಗಿ ಜಾರಿ ಮಾಡುವಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ, ಜಿಲ್ಲಾಧ್ಯಕ್ಷ ಜಿ.ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಮಹಿಳಾ ಅಭಿವೃದ್ದಿ ಮಂಡಳಿ ಅಧ್ಯಕ್ಷೆ ಜಿ.ಪದ್ಮಾವತಿ ಮುಂತಾದವರ ಸಹಕಾರ ಪ್ರಮುಖವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು, ಆಹಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.