

ಹನೂರು: ತಾಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ಜಮೀನು ಒತ್ತುವರಿ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ರಾಜಮ್ಮ ಅವರ ಅಂತ್ಯಕ್ರಿಯೆ ಭಾನುವಾರ ನಡೆಯಿತು.
ರಾಜಮ್ಮ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಮೃತದೇಹವನ್ನು ಒತ್ತುವರಿ ತೆರವುಗೊಳಿಸಿದ್ದ ಸ್ಥಳದಲ್ಲಿರಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮೃತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದರು.
ಶನಿವಾರ ಬೆಳಗ್ಗೆ ಶಾಸಕ ಎಂ.ಆರ್.ಮಂಜುನಾಥ್ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಅಂತ್ಯ ಸಂಸ್ಕಾರ ನೆರವೇರಿಸುವಂತೆ ತಿಳಿಸಿದ್ದರೂ ಗ್ರಾಮಸ್ಥರು ಮಣಿಯಲಿಲ್ಲ. ಇತ್ತ ತಹಸೀಲ್ದಾರ್ ಕೆ.ಎನ್.ಚೈತ್ರಾ ಅವರು ಮನವೊಲಿಸುವ ಕಾರ್ಯ ಸಾಧ್ಯವಾಗಲಿಲ್ಲ. ಇದರಿಂದ ಪ್ರತಿಭಟನೆ ಮುಂದುವರಿದಿತ್ತು. ಇದನ್ನು ತಿಳಿದ ಶಾಸಕರು ಮತ್ತೆ ಸ್ಥಳಕ್ಕೆ ಆಗಮಿಸಿ ಮೃತ ಕುಟುಂಬಕ್ಕೆ ಜಮೀನು ಕೊಡಿಸುವುದಾಗಿ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಕೈ ಬಿಟ್ಟರು. ಬೆಳಗ್ಗೆಯಿಂದಲೂ ರಾತ್ರಿಯವರೆಗೂ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ರಾತ್ರಿಯೇ ಮೃತದೇಹವನ್ನು ಹನೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನಿಸಿದ್ದರು. ಭಾನುವಾರ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು. ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.