ಮಡಿಕೇರಿಯಲ್ಲಿ ಸಚಿವ ಬೋಸರಾಜು ಧ್ವಜಾರೋಹಣ

rajyotsava
Published on

ಮಡಿಕೇರಿ

21 ನೇ ಶತಮಾನದ ಈ ಹೊತ್ತಿನಲ್ಲೂ ಕನ್ನಡ ಭಾಷೆ ಆಧುನೀಕತೆಯೊಂದಿಗೆ ತನ್ನದೇ ಅಸ್ಮಿತೆ ಉಳಿಸಿಕೊಂಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು. 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕೊಡಗು ಜಿಲ್ಲಾಡಳಿತ ವತಿಯಿಂದ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಈ ಮಣ್ಣಿಗೆ, ಈ ನುಡಿಗೆ ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ, ಆದ್ದರಿಂದ ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಾರ್ಯ ನಾವು ಮಾಡಬೇಕಿದೆ. ಕನ್ನಡ, ಕರ್ನಾಟಕ, ಕರುನಾಡು ಎಂಬುದು ಕೇವಲ ಬರೀ ನೆಲ ಮತ್ತು ಭಾಷೆಯಲ್ಲ. ಅದೊಂದು ಕನ್ನಡಿಗರ ಭಾವನೆ ಮತ್ತು ಬಾಂಧವ್ಯವಾಗಿದೆ. ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು. ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಅಂತಹ ಎಲ್ಲಾ ಮಹಾನ್ ಚೇತನರನ್ನು ಅತ್ಯಂತ ಕೃತಜ್ಞತೆಯಿಂದ ಸ್ಮರಿಸಲಾಗುವುದು.

ಸುಮಾರು ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಹಾಗೂ ಸಾಹಿತ್ಯದ ಹಿರಿಮೆ ವಿಶ್ವವ್ಯಾಪಿಯಾಗಿದ್ದು, ಪಂಪ, ರನ್ನ, ಜನ್ನ, ಪೊನ್ನ, ಕುಮಾರವ್ಯಾಸ ಮುಂತಾದ ಕವಿಗಳು ಕನ್ನಡ ಭಾಷಾ ದೀವಿಗೆಯನ್ನು ಆಗಸದೆತ್ತರಕ್ಕೆ ಬೆಳಗಿಸಿದ್ದಾರೆ. ಪುರಂದರದಾಸ, ಕನಕದಾಸರ ಭಕ್ತಿಪಂಥ ಮತ್ತು ಕೀರ್ತನೆಗಳ ಮೂಲಕ ಹಾಗೂ ಬಸವಾದಿ ಶರಣರು ತಮ್ಮ ವಚನಗಳ ಮೂಲಕ ಅದ್ಭುತವಾದ ಸಾಮಾಜಿಕ ಕ್ರಾಂತಿ ಮಾಡಿ ಕನ್ನಡ ನಾಡು-ನುಡಿಯನ್ನು ಶ್ರೀಮಂತಗೊಳಿಸಿದ್ದಾರೆ. ಸಾಹಿತ್ಯ, ಸಂಸ್ಕೃತಿ, ಸಂಗೀತ, ಸದಾಭಿರುಚಿ, ಸಂಪ್ರದಾಯ, ಸಂಸ್ಕಾರ ಯಾವುದೇ ಕ್ಷೇತ್ರದಲ್ಲೂ ಕನ್ನಡಿಗರು ಕಡಿಮೆಯಿಲ್ಲ. ಇಂತಹ ಪವಿತ್ರ ನೆಲದಲ್ಲಿ ಜನಿಸಿದ ನಾವೆಲ್ಲರೂ ಪುಣ್ಯವಂತರು.

ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪಸರಿಸುವಲ್ಲಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಮೈಸೂರು ರಾಜ್ಯ ‘ಕರ್ನಾಟಕ’ ಎಂದು ಮರು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿದೆ. ಈ ಶುಭ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ‘ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬAಧಿಸಿದAತೆ ಹಾಗೂ ಯುವಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರ್ಣಗೊಳ್ಳುತ್ತಿದ್ದು, ಹಲವು ‘ಗ್ಯಾರಂಟಿ ಯೋಜನೆ’ಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ಜನರ ಮನಃ ಗೆದ್ದಿದೆ. ಗ್ಯಾರಂಟಿ ಯೋಜನೆಗಳಲ್ಲಿ ‘ಶಕ್ತಿ’ ಯೋಜನೆ ಪ್ರಮುಖವಾಗಿದ್ದು, ಅ. 20 ರವರೆಗೆ 76,54,554 ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಈವರೆಗೆ ಒಟ್ಟು 63.16 ಕೋಟಿ ರೂ.ಗಳನ್ನು ಪಾವತಿ ಮಾಡಲಾಗಿದೆ. ‘ಗೃಹ ಲಕ್ಷಿö್ಮ’ ಯೋಜನೆಯಡಿ ಜಿಲ್ಲೆಯಲ್ಲಿ ಆಗಸ್ಟ್-2024 ರ ಅಂತ್ಯದವರೆಗೆ ಒಟ್ಟು 287.78 ಕೋಟಿ ರೂ. ಜಿಲ್ಲೆಯ ಕುಟುಂಬದ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಗೃಹಜ್ಯೋತಿಯ ವೆಚ್ಚ 7959.08 ಲಕ್ಷ ರೂ.ನ್ನು ಸರ್ಕಾರವು ಭರಿಸಿದ್ದು, ಶೇ.99.59 ರಷ್ಟು ಪ್ರಗತಿ ಸಾಧಿಸಲಾಗಿದೆ. ಯುವನಿಧಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 2024ರ ಅಂತ್ಯಕ್ಕೆ 1017 ಫಲಾನುಭವಿಗಳ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಹಣ ಪಾವತಿಸಲಾಗಿದೆ.

ಮಡಿಕೇರಿಯ ಗಾಂಧಿ ಮೈದಾನದಲ್ಲಿ ಶಾಶ್ವತವಾಗಿ ರಂಗ ಮಂದಿರ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಈ ವರ್ಷ ದಸರಾ ಯಶಸ್ವಿಯಾಗಿ ಮುಗಿದಿದ್ದು, ಮುಂದಿನ ವರ್ಷ ದಸರಾಗೆ ಈಗಿನಿಂದಲೇ ಸಿದ್ಧತೆಗಳು ನಡೆಯಬೇಕಿದೆ.

ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಮುಂಗಾರು ಅವಧಿಯಲ್ಲಿ ಯಾವುದೇ ಮಾನವಹಾನಿ ಸಂಭವಿಸಿರುವುದಿಲ್ಲ. ಮನೆಹಾನಿ, ಜಾನುವಾರು ಹಾನಿಗಳಿಗೆ ಸಂಬAಧಿಸಿದAತೆ ಈಗಾಗಲೇ ಪರಿಹಾರ ನೀಡಲಾಗಿದೆ ಎಂದರು.

ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಡಿವೈಎಸ್ ಪಿ ಮಹೇಶ್ ಕುಮಾರ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ತಹಸೀಲ್ದಾರ್ ಪ್ರವೀಣ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ.ದೊಡ್ಡೇಗೌಡ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ಆಕರ್ಷಕ ಪಥಸಂಚಲನ ನಡೆಯಿತು. ಜಿಲ್ಲಾ ಪೊಲೀಸ್ ಶಶಸ್ತç ದಳ, ನಾಗರಿಕ ಪೊಲೀಸ್ ತಂಡ, ಗೃಹರಕ್ಷಕ ದಳ, ಅರಣ್ಯ ಇಲಾಖೆ, ವಿವಿಧ ಕಾಲೇಜುಗಳ ಎನ್‌ಎಸ್‌ಎಸ್ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಮಾಧ್ಯಮ ಮತ್ತು ಕನ್ನಡ ವಿಷಯದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜಿನ ಯಶಸ್ವಿನಿ ಕೆ.ಜೆ., ಮೂರ್ನಾಡು ಸರ್ಕಾರಿ ಪದವಿ ಕಾಲೇಜಿನ ನಿಶ್ಮಿತಾ ಹೆಚ್.ಆರ್., ಮಾಲ್ದಾರೆ ಸರ್ಕಾರಿ ಪ್ರೌಢಶಾಲೆಯ ನಿಶಾಂಕ್ ಜೆ.ಎಲ್., ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಗಾನಶ್ರಿ ಹೆಚ್.ಕೆ., ಕುಶಾಲನಗರ ಸಂಯುಕ್ತ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ನೇತ್ರಾವರಿ ಹಾಗೂ ಪಿಯುಸಿಯಲ್ಲಿ ಕನ್ನಡ ಮಾಧ್ಯಮ ಮತ್ತು ಕನ್ನಡ ವಿಷಯದಲ್ಲಿ ಅತ್ಯಧಿಕ ಅಂಕ ಗಳಿಸಿದ ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಯಿಷಾ ರಿಷಾನ ಕೆ.ಇ., ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದೇವಿ ಡಿ.ಎಸ್., ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮನಿಷಾ ಬಿ.ಕೆ. ಆವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net