ದಸರಾ ಮಾದರಿಯಲ್ಲೇ ರಾಜ್ಯೋತ್ಸವ

3
Published on

ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್​ ಸೂಚನೆ

ವಿಜಯವಾಣಿ ಸುದ್ದಿಜಾಲ ತುಮಕೂರು
ಜಿಲ್ಲಾಡಳಿತದ ವತಿಯಿಂದ ನವೆಂಬರ್​ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭಕಲ್ಯಾಣ್​ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಡಳಿತದ ವತಿಯಿಂದ ಪ್ರಪ್ರಥಮ ಬಾರಿಗೆ ಆಚರಿಸಲಾದ ದಸರಾ ಉತ್ಸವದ ಮಾದರಿಯಲ್ಲೇ ಕನ್ನಡ ರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದರು. ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿದೇವಿ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿ ಇರಿಸಿ ಸಾಂಸತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರದೊಂದಿಗೆ ಮೆರವಣಿಗೆ ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಸರ್ಕಾರದ 5 ಗ್ಯಾರಂಟಿಗಳ ಜತೆಗೆ ಜಿಪಂ, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಆಹಾರ, ಮೀನುಗಾರಿಕೆ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ, ಪಶುವೈದ್ಯಕಿಯ, ರೇಷ್ಮೆ ಇಲಾಖೆಗಳ ಪ್ರಸ್ತುತ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯುಳ್ಳ ಉತ್ತಮ ಸ್ತಬ್ಧಚಿತ್ರಗಳನ್ನು ಸೃಜನಾತ್ಮಕವಾಗಿ ರೂಪಿಸಬೇಕು ಎಂದು ನಿರ್ದೇಶಿಸಿದರು.


ಮೆರವಣಿಗೆಯಲ್ಲಿ ಕಡ್ಡಾಯವಾಗಿ ಎಲ್ಲ ಇಲಾಖಾಧಿಕಾರಿಗಳು, ಶಾಲಾ-&ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ನಾಡಿನ ಜ್ಞಾನಪೀಠ ಪ್ರಶಸ್ತಿ ಪುರಸತ ಕವಿಗಳು ಹಾಗೂ ಜಿಲ್ಲೆಯ ಹೆಸರಾಂತ ಸಾಹಿತಿ ಹಾಗೂ ಕವಿಗಳ ಭಾವಚಿತ್ರದೊಂದಿಗೆ ಸಮಾಜಮುಖಿ ಚಿಂತನೆಯುಳ್ಳ ಅವರ ಬರಹದ ಸಾಲುಗಳ ಘೋಷ ವಾಕ್ಯಗಳ ಫಲಕಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸುವಂತೆ ಕ್ರಮ ಕೈಗೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೂ ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದವರ ಪರಿಚಯ ಆದಂತಾಗುತ್ತದೆ ಎಂದರು.


ಮೆರವಣಿಗೆಯಲ್ಲಿ ಭಾಗವಹಿಸುವ ಅಧಿಕಾರಿಗಳು, ವಿದ್ಯಾರ್ಥಿಗಳು, ಸ್ತಬ್ಧಚಿತ್ರಗಳು ಅಂದು ಬೆಳಗ್ಗೆ 7.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಬಳಿ ಹಾಜರಿರಬೇಕು. ಮೆರವಣಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂಭಾಗದಿಂದ ಪ್ರಾರಂಭಗೊಂಡು ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ತಲುಪಲಿದೆ ಎಂದರು.
ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಬೆಳಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಧ್ವಜಸ್ತಂಭ, ಗೌರವರಕ್ಷೆ ಸ್ವೀಕಾರ ಸೇರಿದಂತೆ ಕಾರ್ಯಕ್ರಮ ನಡೆಸಲು ಅಗತ್ಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕೆಂದು ಸೂಚಿಸಿದರು.


ಅಪರ ಜಿಲ್ಲಾಧಿಕಾರಿ ಡಾ.ಎನ್​.ತಿಪ್ಪೇಸ್ವಾಮಿ ಮಾತನಾಡಿ, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ಎಲ್ಲ ಸರ್ಕಾರಿ ಕಚೇರಿ ಕಟ್ಟಡ ಸೇರಿದಂತೆ ಪ್ರಮುಖ ವೃತ್ತಗಳನ್ನು ವಿದ್ಯುತ್​ ದೀಪಗಳಿಂದ ಅಲಂಕರಿಸಬೇಕು. ಜಿಲ್ಲೆಯ ಎಲ್ಲ ಸಾಹಿತಿ, ಕಲಾವಿದರುಗಳಿಗೆ, ಜನಪ್ರತಿನಿಧಿಗಳಿಗೆ, ವಿಶೇಷ ಆಹ್ವಾನಿತರಿಗೆ ಮುಂಚಿತವಾಗಿ ಆಹ್ವಾನ ಪತ್ರ ಸಿದ್ಧಪಡಿಸಿ ತಲುಪಿಸುವ ಕೆಲಸ ನಿರ್ವಹಿಸುವಂತೆ ಕನ್ನಡ ಮತ್ತು ಸಂಸತಿ
ಇಲಾಖೆಗೆ ಸೂಚಿಸಿದರು. ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಅಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರನ್ನೊಳಗೊಂಡ ಸಮಿತಿಯ ಮೂಲಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಿ, ಪಟ್ಟಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕೆಂದು ನಿರ್ದೇಶಿಸಿದರು.


ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ರಮೇಶ್​, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net