ಮಂಗಳೂರು: ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಬುಧವಾರ ಜರುಗಿದ ಉಡುಪಿ ಶ್ರೀ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಗುರುವಂದನೆ ಹಾಗೂ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಮತ್ತು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರ 72ರ ಹುಟ್ಟುಹಬ್ಬ ಸಂಭ್ರಮದ ಅಭಿವಂದನಾ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಸಹಕಾರ ಸಂಘ ಗಳಿಂದ ಒಟ್ಟು 1,01,11,072 ಮೊತ್ತವನ್ನು ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಸ್ವಾಮೀಜಿಯವರಿಗೆ ಹಸ್ತಾಂತರಿಸಲಾಯಿತು.ಆಶೀರ್ವಚನ ನೀಡಿದ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯವಾದ ಶ್ರೀರಾಮ ಮಂದಿರ ಭಾರತದ ಸಂಸ್ಕೃತಿಯ ಪ್ರತೀಕವಾಗಿ ಮೂಡಿ ಬರಲಿದೆ. ಶ್ರೀರಾಮ ನಮಗೆಲ್ಲರಿಗೂ ಆದರ್ಶ. ಶ್ರೀರಾಮನಂತೆ ನಾವೆಲ್ಲರೂ ಬದುಕಬೇಕು, ರಾವಣನಂತಲ್ಲ ಎಂದರು.
ಕಾರ್ಯಕ್ರಮದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಲಾಯಿತು.ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗಣಿ ಹಾಗೂ ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಮೊದಲಾದವರು ಇದ್ದರು.