

ರಾಮನಗರ
ಮುಕ್ತ ಮತ್ತು ನ್ಯಾಯಸಮ್ಮತ ಹಾಗೂ ನಿಷ್ಪಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮೇ 8ರ ಸಂಜೆ 6 ಗಂಟೆಯಿಂದ ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಬಂಧನೆಗಳಿಗೆ ಒಳಪಟ್ಟು ರಾಮನಗರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಆದೇಶಿಸಿದ್ದಾರೆ.
ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಮತ್ತು ರಾಮನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮತಗಳನ್ನು ಯಾಚಿಸುವ ಸಂದರ್ಭಗಳಲ್ಲಿ ಪರಸ್ಪರ ರ್ಷಣೆ ಉಂಟಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಂಭವಗಳು ಹೆಚ್ಚಾಗಿರುತ್ತವೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
ನಿಷೇಧಿತ ಅವಧಿಯಲ್ಲಿ ಯಾವುದೇ ಬಹಿರಂಗ, ಸಾರ್ವಜನಿಕ ಸಭೆ, ಸಮಾರಂಭ, ಜಾಥಾ, ಮೆರವಣಿಗೆ ಇತ್ಯಾದಿಗೆ ರ್ನಿಬಂಧ ಹೇರಲಾಗಿದೆ. 5 ಜನರಿಗಿಂತ ಹೆಚ್ಚು ಜನರು ಗುಂಪು ಸೇರುವುದು, ಮತದಾನ ಮುಕ್ತಾಯದ ಮುಂಚಿನ 48 ಗಂಟೆಗಳ ಅವಧಿಯಲ್ಲಿ ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿರುತ್ತದೆ. ಇದರ ಹೊರತಾಗಿ ಅಭ್ಯರ್ಥಿಗಳ ಬೆಂಬಲಿಗರು ಚುನಾವಣಾ ಪ್ರಚಾರಕ್ಕಾಗಿ ಮನೆಮನೆಗೆ ಮತಗಳನ್ನು ಯಾಚಿಸಲು ಕೇವಲ 5 ಜನರು ಮಾತ್ರ ಹೋಗತಕ್ಕದ್ದು ಎಂದು ಸೂಚಿಸಲಾಗಿದೆ.
ನಿಷೇಧಾಜ್ಞೆ ಅವಧಿಯಲ್ಲಿ ಸ್ಫೋಟಕ ವಸ್ತುಗಳು, ಮಾರಕಾಸ್ತ್ರ ಕೊಂಡೊಯ್ಯುವುದಾಗಲಿ ಅಥವಾ ಮಾರಕಾಸ್ತಗಳನ್ನು ಹಿಡಿದು ಓಡಾಡುವಂತಿಲ್ಲ. ಯಾವುದೇ ಪ್ರಚಾರಗಳನ್ನು ಅಂದರೆ ಭಿತ್ತಿಪತ್ರ ಹಂಚುವ ಮೂಲಕ ವಾಹನದಲ್ಲಿ ಪ್ರಚಾರ ಮಾಡುವಂತಹ, ಘೋಷಣೆ ಕೂಗುವುದು, ಭಾಷಣ ಮಾಡುವುದಕ್ಕೂ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮದುವೆ, ಮುಂಜಿಗೆ ಅನ್ವಯಿಸಲ್ಲ
ಮದುವೆ, ಮುಂಜಿ, ಶವಸಂಸ್ಕಾರ ಕಾರ್ಯಕ್ರಮಗಳಿಗೆ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಗಳನ್ನು ನಡೆಸುವಂತಿಲ್ಲ. ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿಪತ್ರಗಳನ್ನು ಪ್ರಕಟಿಸುವುದು ಮಾಡುವಂತಿಲ್ಲ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು. ಸಾರ್ವಜನಿಕ ಪ್ರಾಣ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸತಕ್ಕದ್ದಲ್ಲ ಎಂದು ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ. ನಿಷೇಧಾಜ್ಌ ಅವಧಿಯಲ್ಲಿ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ ಹಾಗೂ ಧ್ವನಿವರ್ದಕಗಳನ್ನು ಬಳಸುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.