

ಚನ್ನಪಟ್ಟಣ
ನೌಕರರ ಬಹುಮುಖ್ಯ ಬೇಡಿಕೆಯಾದ ಹೊಸ ಪಿಂಚಣಿ ರದ್ದು ಹಾಗೂ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಎಲ್ಲರೂ ಒಗ್ಗೂಡಿ ನಿರಂತರವಾಗಿ ಹೋರಾಡುತ್ತಿದ್ದು, ಖಂಡಿತವಾಗಿ ಫಲ ಸಿಗಲಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಬಾಲಕರ ಪದವಿಪೂರ್ವ ಕಾಲೇಜ್ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರಿ ನೌಕರರ ಹಿತ ಕಾಪಾಡಲು ಸಂಘ ನಿರಂತರವಾಗಿ ಶ್ರಮಿಸುತ್ತಿದೆ. ನೌಕರರಿಗೆ ಸಿಗಬೇಕಾದ ನ್ಯಾಯಯುತವಾದ ಬೇಡಿಕೆಗಳನ್ನು ಕೊಡಿಸಲು ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ಮಾತನಾಡಿ, ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಗಳು ಸಹಕಾರಿ. ನೌಕರರು ಕ್ರೀಡಾಕೂಟದ ಮೂಲಕ ತಮ್ಮ ಕ್ರೀಡಾ ಪ್ರತಿಭೆ ಅನಾವರಣಗೊಳಿಸಬೇಕು ಎಂದು ಕರೆ ನೀಡಿದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ತಾಲೂಕಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯುತ್ತಿರುವುದು ಸಂತಸದ ವಿಚಾರವಾದರೆ, ಜಿಲ್ಲೆಯ ಸರ್ಕಾರಿ ನೌಕರರ ವಲಯದಲ್ಲಿ ಉತ್ತಮ ಕ್ರೀಡಾಪಟುಗಳಿರುವುದು ಖುಷಿ ತಂದಿದೆ ಎಂದರು.
ರಾಮನಗರ ಡಯಟ್ ಸಿ. ರಾಜಶೇಖರ್, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಬಿ.ಎಲ್. ಸುರೇಂದ್ರ, ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ, ಮಾಗಡಿ ತಾಲೂಕು ಅಧ್ಯಕ್ಷ ಶಿವರಾಮಯ್ಯ, ಕನಕಪುರ ಅಧ್ಯಕ್ಷ ಶಿವಲಿಂಗೇಗೌಡ, ಜಿಲ್ಲಾ ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಟಿ ಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ರಾಮಣ್ಣ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ ನಾಗೇಶ್, ಜಿಲ್ಲೆಯ ಎಲ್ಲ ತಾಲೂಕುಗಳ ಸರ್ಕಾರಿ ನೌಕರರು ಭಾಗವಹಿಸಿದ್ದರು.