

ರಾಮನಗರ: ತಾಲೂಕಿನ ಹರೀಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಶಿವಕುಮಾರ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಆಶಾ ಮಂಚೇಗೌಡ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಶಿವಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾದರು. 16 ಸದಸ್ಯ ಬಲ ಹೊಂದಿರುವ ಗ್ರಾಪಂನಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ 12 ಮಂದಿ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ನಾಲ್ಕು ಜನ ಸದಸ್ಯರು ಗೈರುಹಾಜರಾಗಿದ್ದರು. ಶಿವಕುಮಾರ್ 9 ಮತ ಪಡೆದು ಅಧ್ಯಕ್ಷರಾಗಿ ಆಯ್ಕೆಗೊಂಡರೆ, ವೀರಭದ್ರಸ್ವಾಮಿ ಅವರು ಕೇವಲ ಮೂರು ಮತಗಳನ್ನು ಪಡೆದು ಸೋಲು ಕಂಡರು. ವೀರಭದ್ರಸ್ವಾಮಿ ಕಳೆದ ಭಾರಿಯೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಆಶಾ ಮಂಚೇಗೌಡ ಅವರ ವಿರುದ್ಧ ಸೋಲನ್ನು ಕಂಡಿದ್ದರು.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಶಿವಕುಮಾರ್, ಹರೀಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹದಿನೆಂಟು ತಿಂಗಳುಗಳಿಂದ ಅಧ್ಯಕ್ಷರಾಗಿದ್ದ ಆಶಾ ಮಂಚೇಗೌಡ ಅವರು ಉತ್ತಮ ಕೆಲಸಗಳನ್ನು ಮಾಡಿದ್ದು ಅವುಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮತ್ತು ಸದಸ್ಯರು ಸಹಕರಿಸಿದ್ದು ಎಲ್ಲರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ ಕೆಲಸ ಮುಂದುವರೆಸಿಕೊಂಡು ಹೋಗುತ್ತೇನೆ ಎಂದರು.
ಕೆಂಪೇಗೌಡನದದೊಡ್ಡಿ ಜೆಡಿಎಸ್ ಮುಖಂಡ ಮಂಚೇಗೌಡ ಮಾತನಾಡಿ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಕೆಆರ್‌ಐಡಿಎಲ್ ಅಧ್ಯಕ್ಷ ಎಂ.ರುದ್ರೇಶ್ ಅವರ ಮಾರ್ಗದರ್ಶನದಲ್ಲಿ ಯಾವುದೇ ರೀತಿ ಗೊಂದಲಗಳಿಗೆ ಅವಕಾಶವಾಗದಂತೆ ಸ್ಥಳೀಯ ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ಅಭಿಪ್ರಾಯಗಳನ್ನು ಪಡೆದು ಅಧ್ಯಕ್ಷರ ಆಯ್ಕೆಯನ್ನು ಮಾಡಲಾಗಿದ್ದು, ನೂತನ ಅಧ್ಯಕ್ಷರಾದ ಶಿವಕುಮಾರ್ ಅವರು ಹಿಂದಿನ ಅಧ್ಯಕ್ಷರ ಅವಧಿಯಲ್ಲಿನ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುತ್ತಾರೆ ಎಂಬ ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.
ತಾಪಂ ಮಾಜಿ ಅಧ್ಯಕ್ಷ ಪ್ರಾಣೇಶ್, ಗ್ರಾಪಂ ಮಾಜಿ ಅಧ್ಯಕ್ಷೆ ಆಶಾ ಮಂಚೇಗೌಡ, ಬಿಜೆಪಿ ಮುಖಂಡರಾದ ವರದರಾಜುಗೌಡ ಮತ್ತಿತರರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.