

ರಾಣೆಬೆನ್ನೂರ: ಹಾಸ್ಟೆಲ್‌ಗಳ ಆಯ್ಕೆ ಪ್ರಕ್ರಿಯೆ ವಿಳಂಬ ಹಾಗೂ ಕಳೆದ ವರ್ಷದ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದ ರಾಜ್ಯ ಸಕಾರದ ಕ್ರಮವನ್ನು ಖಂಡಿಸಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ನಗರದ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈಗಾಗಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಹಾಸ್ಟೆಲ್‌ಗಳ ಆಯ್ಕೆ ಪ್ರಕ್ರಿಯೆ ವಿಳಂಬದಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಸಕಾಲದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಮಾಡದ ಕಾರಣ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಆದ್ದರಿಂದ ಸರ್ಕಾರ ಕೂಡಲೇ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಜರುಗಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಎಬಿವಿಪಿ ನಗರ ಕಾರ್ಯದರ್ಶಿ ಪವನಕುಮಾರ ಇಟಗಿ, ಅಭಿಲಾಷ ಬದಾಮಿ, ಅಕ್ಷತಾ ರಣಸೋತ, ಸುಮಾ ಕುಂಬಾರ, ಯಲ್ಲಮ್ಮ ಆರ್.ಎಂ., ಸವಿತಾ ಜಿ., ಸೃಷ್ಠಿ ನಾಯಕ, ಗೀತಮ್ಮ ಲಮಾಣಿ, ಪಲ್ಲವಿ ಕಲ್ಲಜ್ಜನವರ, ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.