

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಯಶಸ್ವಿಯಾಗಿ ಮುನ್ನಡೆಯತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸುವ ಪರೀಕ್ಷೆಯಲ್ಲಿ 10 ರ‌್ಯಾಂಕ್ ಬಂದಿದ್ದು, ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಆದೇಶದಂತೆ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಸೌಖ್ಯವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ರಾಜರ್ಷಿ ಹಾಲ್‌ನಲ್ಲಿ ಗುರುವಾರ ಆಯೋಜಿಸಲಾಗಿತ್ತು.
ಶಾಂತಿವನ ಟ್ರಸ್ಟ್ ಧರ್ಮಸ್ಥಳ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ ಡಾ.ಪ್ರಶಾಂತ್ ಶೆಟ್ಟಿ ಅವರನ್ನು ಅಭಿನಂದಿಸಿ ಮಾತನಾಡಿದರು. ಸೌಖ್ಯವನದ ಮುಖ್ಯವೈದ್ಯಾಧಿಕಾರಿ ಡಾ.ಗೋಪಾಲ ಪೂಜಾರಿ ಒಡನಾಟದ ಬಗ್ಗೆ ಮಾತನಾಡಿದರು. ಸೌಖ್ಯವನ ಸಂಸ್ಥೆಯ ಎಲ್ಲ ವೈದ್ಯಾಧಿಕಾರಿಗಳು, ಕಿರಿಯ ವೈದ್ಯರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಯಶಸ್ವಿ ನಾಯಕತ್ವ ಹಾಗೂ ದೂರದರ್ಶಿತ್ವದಿಂದ ಕಾಲೇಜಿನಲ್ಲಿ 600ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ಸಾಲಿನಲ್ಲಿ ಪ್ರಥಮ 10 ರ‌್ಯಾಂಕ್‌ಗಳು ಬಂದಿದ್ದು, ದೇಶದಲ್ಲೇ ಈ ಕಾಲೇಜನ್ನು ಗುರುತಿಸುವಂತಾಗಿದೆ.