ಬಾಲಕಿ ಮೇಲೆ ಅತ್ಯಾಚಾರವೆಸಗಿ ಮಗು ಜನ್ಮಕ್ಕೆ ಕಾರಣನಾದ ಅಪರಾಧಿಗೆ ಕಠಿಣ ಶಿಕ್ಷೆ

Jail Prison Punishment
Published on

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಮಗುವಿನ ಜನ್ಮಕ್ಕೆ ಕಾರಣನಾದ ಆರೋಪಿ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಕುರಪ್ಪಾಡಿ ನಿವಾಸಿ ಸತೀಶ್ ಎಂಬಾತನಿಗೆ 10 ವರ್ಷಗಳ ಕಠಿಣ ಸಜೆ ಮತ್ತು 60 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಜಿಲ್ಲಾ ಹೆಚ್ಚುವರಿ ಸತ್ರ ಹಾಗೂ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

ಆರೋಪಿ ಮೇಲಿನ ಆರೋಪ ಡಿ.1ರಂದು ಸಾಬೀತಾಗಿದ್ದು ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.

ಐಪಿಸಿ ಸೆ.376 ಅನ್ವಯ 7 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ 6 ತಿಂಗಳ ಸಾದಾ ಸಜೆ, ಪೋಕ್ಸೋ ಕಾಯ್ದೆಯ ಸೆಕ್ಷನ್ 6ರ ಪ್ರಕಾರ 10 ವರ್ಷಗಳ ಕಠಿಣ ಸಜೆ ಮತ್ತು 50 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ತಪ್ಪಿದರೆ 8 ತಿಂಗಳ ಸಾದಾ ಸಜೆ ವಿಧಿಸಿ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವೆಂಕಟರಮಣ ಭಟ್ ತೀರ್ಪು ನೀಡಿದ್ದಾರೆ. ದಂಡದ ಮೊತ್ತದಲ್ಲಿ 50 ಸಾವಿರ ರೂ.ಗಳನ್ನು ಸಂತ್ರಸ್ತ ಬಾಲಕಿಗೆ ಪಾವತಿಸಬೇಕು ಹಾಗೂ ಸರ್ಕಾರದಿಂದ 6 ಲಕ್ಷ ರೂ.ಗಳನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಬೇಕೆಂದೂ ನ್ಯಾಯಾಧೀಶರು ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಆರೋಪಿ ಸತೀಶ ಬಾಲಕಿಯ ಮಾವನ ಜತೆ ಕೂಲಿ ಕೆಲಸ ಮಾಡಿಕೊಂಡಿದ್ದು, ಬಾಲಕಿ ಜತೆ ಸ್ನೇಹ ಬೆಳೆಸಿದ್ದ. 2018ನೇ ಜನವರಿ ಕೊನೇ ವಾರದಲ್ಲಿ ಬಾಲಕಿಯನ್ನು ಮನೆ ಪಕ್ಕದ ಗುಡ್ಡಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರವೆಸಗಿದ್ದ. ಇದರಿಂದ ಆಕೆ ಗರ್ಭಿಣಿಯಾಗಿದ್ದಳು. 2018 ಆ.3ರಂದು ಬಾಲಕಿಯ ತಾಯಿ ಮೃತಪಟ್ಟಿದ್ದು, ಈ ಸಂದರ್ಭ ಬಾಲಕಿ ನಡತೆ ಬಗ್ಗೆ ಮಾವನಿಗೆ ಅನುಮಾನ ಬಂದು ಆಕೆಯನ್ನು ಪ್ರಶ್ನಿಸಿದಾಗ ಆರೋಪಿ ಯುವಕ ಅತ್ಯಾಚಾರಗೈದ ಪರಿಣಾಮ ಗರ್ಭಿಣಿಯಾಗಿರುವ ವಿಚಾರ ತಿಳಿಸಿದ್ದಳು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ನಿರೀಕ್ಷಕರು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದಲ್ಲಿ ಒಟ್ಟು 14 ಮಂದಿ ಸಾಕ್ಷಿದಾರರನ್ನು ವಿಚಾರಣೆ ಮಾಡಿ 18 ದಾಖಲೆಗಳನ್ನು ಗುರುತಿಸಲಾಗಿತ್ತು. ಆರೋಪಿ, ನೊಂದ ಬಾಲಕಿ ಮತ್ತು ಮಗುವಿನ ಡಿಎನ್‌ಎ ವರದಿಯಲ್ಲಿ ಸತೀಶ್ ಮಗುವಿನ ತಂದೆಯೆಂದು ದೃಢಪಟ್ಟಿತ್ತು. ಸರ್ಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net