ವಿದ್ಯಾರ್ಥಿನಿ ಅತ್ಯಾಚಾರ ಖಂಡನೀಯ

Published on

ಬಳ್ಳಾರಿ : ಬೆಂಗಳೂರಿನ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಎಸಗಿ ಬೆದರಿಕೆಯೊಡ್ಡಿರುವ ಉಪನ್ಯಾಸಕರ ಕೃತ್ಯ ಖಂಡಿಸಿ, ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ಎಐಡಿಎಸ್‌ಒ ಸಂಘಟನೆಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಸಂಘಟನೆ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಬೆದರಿಕೆ ಹಾಕಿರುವ ಇಬ್ಬರು ಉಪನ್ಯಾಸಕರಿಗೆ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆ ವಿಧಿಸಬೇಕು. ಮಹಿಳೆಯರ ಮೇಲೆ ದಿನೇದಿನ ದೌರ್ಜನ್ಯ ಹೆಚ್ಚುತ್ತಿದೆ. ಈಚೆಗೆ ಒರಿಸ್ಸಾದಲ್ಲಿ ಕಾಲೇಜಿನ ಉಪನ್ಯಾಸಕರು ನೀಡಿರುವ ಲೈಂಗಿಕ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿಯು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡದಿದ್ದರೆ, ಇಂತಹ ಪ್ರಕರಣಗಳು ಹೆಚ್ಚಾಗುತ್ತವೆ. ಯುವ ಮನಸ್ಸುಗಳನ್ನು ಸ್ವಚ್ಛಗೊಳಿಸಿ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕಾದ ಪ್ರಾಧ್ಯಾಪಕರು ಇಂತಹ ಹೇಯ ಕೃತ್ಯಗಳಲ್ಲಿ ಭಾಗಿಯಾಗಿರುವುದು ದುರಂತವೇ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಘಟನೆಯ ಬಗ್ಗೆ ತ್ವರಿತ, ನಿಷ್ಪಕ್ಷಪಾತ ಮತ್ತು ಸಂಪೂರ್ಣ ತನಿಖೆ ನಡೆಸಿ ಅಪರಾಧಿಗಳನ್ನು ಕೂಡಲೇ ಕಾನೂನಿನ ಮುಂದೆ ತರಬೇಕು. ಆರೋಪಿ ಉಪನ್ಯಾಸಕರನ್ನು ತಕ್ಷಣವೇ ಅಮಾನತುಗೊಳಿಸಬೇಕು. ಸರ್ಕಾರ ಕೂಡ ಯುವಜನರಲ್ಲಿ ಉನ್ನತ ಆದರ್ಶ ಮೌಲ್ಯಗಳನ್ನು ಬಿತ್ತುವ ನಿಟ್ಟಿನಲ್ಲಿ ಕಾಲೇಜುಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net