

ಶಿಗ್ಗಾಂವಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮತ್ತು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಡಿ. 14ರಂದು ಸ್ಥಳೀಯ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಆದಾಲತ್ ನಡೆಯಲಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಸುನೀಲ ತಳವಾರ ಹೇಳಿದರು.
ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಆಯೋಜಿಸಿದ್ದ ತಾಲೂಕು ಕಾನೂನು ಸೇವಾ ಸಮಿತಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಮಾಡಿಕೊಳ್ಳಲು ಇದೊಂದು ಅವಕಾಶವಾಗಿದ್ದು, ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಷ್ಟಪಡುವ ಸಾರ್ವಜನಿಕರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂರ್ಪಸಿ ಮಾಹಿತಿ ಪಡೆದುಕೊಳ್ಳಬಹುದು. ಮಾಹಿತಿಗಾಗಿ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಹಾಗೂ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು ಎಂದು ನ್ಯಾಯಾಧೀಶರಾದ ಸುನೀಲ ತಳವಾರ ತಿಳಿಸಿದರು.
ನ್ಯಾಯಾಧೀಶೆ ಅಶ್ವಿನಿ ಚಂದ್ರಕಾಂತ ಹಾಗೂ ನ್ಯಾಯವಾದಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.