

ವಿಜಯಪುರ: ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯಾದ್ಯಂತ ಅಧೀನ ನ್ಯಾಯಾಲಯಗಳಲ್ಲಿ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರು ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷಶಿವಾಜಿ ಅನಂತ ನಲವಾಡೆ ತಿಳಿಸಿದರು.
ರಾಜಿ-ಸಂಧಾನಕ್ಕೆ ಒಳಪಡಬಹುದಾದ ಎಲ್ಲ ಕ್ರಿಮಿನಲ್ ಪ್ರಕರಣಗಳನ್ನು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತದಲ್ಲಿ ಪರಿಹಾರ ಕೋರಿ ಸಲ್ಲಿಕೆಯಾಗಿರುವ ಪ್ರಕರಣಗಳು, ವಿಚ್ಛೇದನ ಹೊರತುಪಡಿಸಿ ಇರುವ ಕೌಟುಂಬಿಕ ವ್ಯಾಜ್ಯಗಳು ಸೇರಿದಂತೆ ಹಲವು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದೆಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಆಸ್ತಿಯಲ್ಲಿ ವಿಭಾಗ ಕೋರಿರುವ ದಾವೆಗಳು ಹಾಗೂ ದೂರವಾಣಿ ಬಾಕಿ ಬಿಲ್ಲುಗಳ ಪಾವತಿ ಪ್ರಕರಣಗಳು, ನೀರಿನ ಬಿಲ್ ಪಾವತಿ ಪ್ರಕರಣಗಳು, ಜೀವನಾಂಶ ಕೋರಿರುವ ಪ್ರಕರಣಗಳು, ಕಾರ್ಮಿಕ ವ್ಯಾಜ್ಯಗಳು, ಭೂ-ಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಬ್ಯಾಂಕ್ ವ್ಯಾಜ್ಯಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನುನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ, ಜಿಲ್ಲಾ ನ್ಯಾಯಾವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ, ಜಿಲ್ಲಾ ನ್ಯಾಯಾವಾದಿಗಳ ಸಂಘದ ಕಾರ್ಯದರ್ಶಿ ಎಸ್.ಎಸ್. ಚೂರಿ ಮತ್ತಿತರರಿದ್ದರು.