ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್

000000
Published on

ದೊಡ್ಡಬಳ್ಳಾಪುರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಕಕ್ಷಿದಾರರು ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ವಿವಿಧ ರೀತಿಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಮೇಶ್ ದುರುಗಪ್ಪ ಏಕಬೋಟೆ ತಿಳಿಸಿದರು.

ನಗರದ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ಲೋಕ ಅದಾಲತ್‌ನಲ್ಲಿ ರಾಜಿ ಆಗುವ ಪ್ರಕರಣಗಳ ಕುರಿತಂತೆ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಮುಖ್ಯಸ್ಥರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಲೋಕ ಅದಾಲತ್‌ನಲ್ಲಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಬಹುದಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಲು ಕಕ್ಷಿದಾರರಿಗೆ ಸಲಹೆ ನೀಡಬೇಕು. ಕೆಲ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳುವ ಮೂಲಕ ವ್ಯಾಜ್ಯಗಳನ್ನು ಮುಗಿಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ, ವಕೀಲರು, ಸ್ಥಳೀಯ ಆಡಳಿತ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದರು.

ವಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಿಸಿದ ವಕೀಲರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.

ಯಾವ್ಯಾವ ಪ್ರಕರಣ ಇತ್ಯರ್ಥವಾಗುತ್ತೆ?

ಲೋಕ ಅದಾಲತ್‌ನಲ್ಲಿ ರಾಜಿಯಾಗಬಲ್ಲ ಅಪರಾಧ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಂದಾಯ, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಅಮಾನ್ಯ ಪ್ರಕರಣಗಳು, ಮೋಟಾರು ಅಪಘಾತ ನ್ಯಾಯಾಧಿಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ರಾಜಿಯಾಗಬಲ್ಲ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ನ್ಯಾಯಾಲಯಗಳಲ್ಲಿ ಉಭಯ ಕಕ್ಷಿದಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಶಿಲ್ಪಾ ಎಚ್.ಎ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net