

ಚನ್ನರಾಯಪಟ್ಟಣ: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ, ಸಂಧಾನದ ಮೂಲಕ ಬಗೆಹರಿಸಲು ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ನಾಲ್ಕನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ವಿ.ಎನ್.ಜಗದೀಶ್ ತಿಳಿಸಿದರು.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದಾಲತ್‌ನಲ್ಲಿ ಸಾರ್ವಜನಿಕರು ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಮರು ಸ್ಥಾಪನೆ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದವು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರ ಸಿವಿಲ್ ಪ್ರಕರಣಗಳು ಸೇರಿವೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ, ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕರ ವಿವಾದಗಳು, ಭೂಸ್ವಾಧೀನ, ಕಂದಾಯ ಪ್ರಕರಣಗಳು ಹಾಗೂ ರಾಜಿಯಾಗಬಲ್ಲ ಸಿವಿಲ್ ಮತ್ತು ಇತರ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನೂ ರಾಜಿ, ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜಿ, ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಸಂಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಲೋಕ ಅದಾಲತ್‌ನಿಂದ ವ್ಯಾಜ್ಯವನ್ನು ಅತ್ಯಂತ ಕಡಿಮೆ ಖರ್ಚಿನಲ್ಲಿ, ಶೀಘ್ರವಾಗಿ ಪರಿಹರಿಸಿಕೊಳ್ಳಬಹುದು. ಇಲ್ಲಿ ರಾಜಿಯಾದ ಪ್ರಕರಣಗಳಲ್ಲಿ ಮಾಡಿದ ಆದೇಶಕ್ಕೆ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸುವ ಪ್ರಕರಣದಲ್ಲಿ ನೀಡಿದ ಆದೇಶದಷ್ಟೆ ಮಹತ್ವ ಇರುತ್ತದೆ. ಸಮಯ ಉಳಿಯುವ ಜತೆಗೆ ಕಕ್ಷಿದಾರರ ನಡುವಿನ ಸಂಬಂಧ ಚೆನ್ನಾಗಿ ಉಳಿಯುತ್ತದೆ. ಯಾವುದೇ ಕೋರ್ಟ್ ಫೀಸ್ ಕಟ್ಟಬೇಕಿಲ್ಲ. ಪ್ರಕರಣ ರಾಜಿಯಾದಲ್ಲಿ ಶೇ.100ರಷ್ಟು ನ್ಯಾಯಾಲಯ ಶುಲ್ಕ ಹಿಂದಿರುಗಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹಿರಿಯ ನ್ಯಾಯಾಧೀಶೆ ಅರುಣ್‌ಕುಮಾರಿ, ಹೆಚ್ಚುವರಿ ಹಿರಿಯ ನ್ಯಾಯಾಧೀಶ ಅರುಣ್ ಗುಡಿಗೇನವರ್, ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಸಿ.ದೀಪು, ಒಂದನೇ ಅಧಿಕ ಸಿವಿಲ್ ನ್ಯಾಯಾಧೀಶೆ ರಶ್ಮಿ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಸುಂದರರಾಜ್, ಉಪಾಧ್ಯಕ್ಷ ಬಸವರಾಜ್, ಕಾರ್ಯದರ್ಶಿ ಎ.ಡಿ.ಕುಮಾರ್, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲಗಳು ಭಾಗವಹಿಸಿದ್ದರು.