ಪಡಿತರ ಚೀಟಿದಾರರಿಗೆ ಹಣ ವರ್ಗಾವಣೆ

17mdk04
Published on

ಮಡಿಕೇರಿ:

ಸರ್ಕಾರದ ಆದೇಶದಂತೆ ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ ೦೫ ಕೆ.ಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ೫ ಕೆ.ಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಜುಲೈ ತಿಂಗಳಿನಿಂದ ಪ್ರತಿ ಕೆ.ಜಿಗೆ ೩೪ ರೂ. ನಂತೆ ೧೭೦ ರೂ.ಗಳನ್ನು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮತನಾಡಿದರು.
ಇನ್ನು ೨ ಅಥವಾ ೩ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದ್ದು, ಈಗಾಗಲೇ ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿದೆ. ಎಎವೈ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಕೊಡಗು ಜಿಲ್ಲೆಯ ೮೦,೫೨೫ ಫಲಾನುಭವಿಗಳಿಗೆ ರೂ. ೪,೨೪,೬೭,೫೩೦ ಮೊತ್ತವನ್ನು ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದರು.
ಫಲಾನುಭವಿಗಳು ಖಾತೆಗೆ ಜಮೆ ಆಗಿರುವ ಬಗ್ಗೆ ಮತ್ತು ಈ ಕುರಿತು ಸಮಸ್ಯೆಗಳಿದ್ದರೆ ಸ್ಥಳೀಯವಾಗಿ ತಾಲೂಕಿನ ಆಹಾರ ಶಿರಸ್ತೇದಾರರು ಅಥವಾ ನಿರೀಕ್ಷಕರುಗಳನ್ನು ಸಂಪರ್ಕಿಸಬಹುದಾಗಿದೆ.

ಆಧಾರ್ ಜೋಡಣೆ ಮಾಡಿರುವ ಮತ್ತು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯ ಕುಟುಂಬಗಳು ನೇರ ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಕಳೆದ ಮಾರ್ಚ್, ಏಪ್ರಿಲ್, ಮೇ ತಿಂಗಳುಗಳಲ್ಲಿ ಸತತವಾಗಿ ಪಡಿತರ ಆಹಾರ ಧಾನ್ಯವನ್ನು ಪಡೆಯದ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಕುಮುದ ಶರತ್ ಇದೇ ವೇಳೆ ಮಾಹಿತಿ ನೀಡಿದರು.

ಅಂತ್ಯೋದಯ ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬಗಳ ಪಡಿತರ ಚೀಟಿಗೆ ಈಗಾಗಲೆ ೩೫ ಕೆ.ಜಿ ಅಕ್ಕಿ ಪ್ರತಿ ತಿಂಗಳು ನೀಡುತ್ತಿರುವುದರಿಂದ ಅಂತಹ ಅಂತ್ಯೋದಯ ಪಡಿತರ ಚೀಟಿಗಳಿಗೆ ನೇರ ನಗದು ವರ್ಗಾವಣೆ ಸೌಲಭ್ಯವನ್ನು ನೀಡಲಾಗುವುದಿಲ್ಲ. ಉಳಿದಂತೆ ೪ ಸದಸ್ಯರಿದ್ದರೆ, ಈ ಕುಟುಂಬ ೧೭೦ ರೂ.ಗಳನ್ನು, ೫ ಸದಸ್ಯರನ್ನು ಹೊಂದಿರುವ ಕುಟುಂಬ ರೂ ೫೧೦ ರೂ.ಗಳನ್ನು ಅಥವಾ ೬ ಸದಸ್ಯರನ್ನು ಹೊಂದಿರುವ ಕುಟುಂಬ ರೂ.೮೫೦ ರೂ. ಪಡೆಯುತ್ತದೆ. ಇದಕ್ಕಿಂತ ಹೆಚ್ಚಿನ ಸದಸ್ಯರಿದ್ದಲ್ಲಿ ಇದೇ ಅನುಪಾತವು ಮುಂದುವರೆಯುತ್ತದೆ ಎಂದು ಹೇಳಿದರು.
ಡಿ.ಬಿ.ಟಿ ಮುಖಾಂತರ ಪಡಿತರ ಚೀಟಿ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡುವ ಯೋಜನೆ ಸಂಬಂಧ ಒಟ್ಟು ೧೨೯೩೦ ಡಿ.ಬಿ.ಟಿ ಫಲಾನುಭವಿಗಳ ಬ್ಯಾಂಕ್ ಖಾತೆಯು ಇನ್‌ಆಕ್ಟಿವ್ ಸ್ಥಿತಿಯಲ್ಲಿದ್ದು, ಇಂತಹ ಫಲಾನುಭವಿಗಳ ಪಟ್ಟಿಯನ್ನು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರದರ್ಶಿಸಲಾಗಿರುತ್ತದೆ. ಈ ಪಟ್ಟಿಯಲ್ಲಿರುವ ಫಲಾನುಭವಿಗಳು ತುರ್ತಾಗಿ ತಮ್ಮ ಬ್ಯಾಂಕ್ ಖಾತೆಗಳನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ್, ಅಂಚೆ ಕಚೇರಿ ವ್ಯವಸ್ಥಾಪಕ ಬಿಬಿನ್ ಅವರು ಬ್ಯಾಂಕ್ ಖಾತೆ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದರು.

ಕೆಎಪ್‌ಸಿಸಿಎಫ್ ಕೊಡಗು ಜಿಲ್ಲಾ ವ್ಯವಸ್ಥಾಪಕ ಪ್ರೇಮ್ ಕುಮಾರ್, ಬೆಂಬಲ ಬೆಲೆ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಕೆ.ಪಿ.ಸೋಮಯ್ಯ, ಸಗಟು ಮಳಿಗೆ,ಗೋದಾಮು ವ್ಯವಸ್ಥಾಪಕರು, ಆಹಾರ ನಿರೀಕ್ಷಕರು, ಆಹಾರ ಶಿರಸ್ತೆದಾರರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net