

ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದಲ್ಲಿ ಆ. 15ರಂದು ಸಂಜೆ 5 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಉತ್ಸವ ಆಯೋಜಿಸಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ 31 ಜನ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಹಾಗೂ ಐವರು ಮಹಿಳೆಯರಿಗೆ ವೀರರಾಣಿ ಕಿತ್ತೂರ ಚನ್ನಮ್ಮ ಪ್ರಶಸ್ತಿ ನೀಡಲಾಗುವುದು. ವೇದಿಕೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಉದ್ಘಾಟಿಸುವರು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಯಮಿ ಡಾ. ವಿಜಯ ಸಂಕೇಶ್ವರ ಉದ್ಘಾಟಿಸುವರು ಎಂದು ಹೇಳಿದರು.
ಮನಸೂರಿನ ರೇವಣಸಿದ್ದೇಶ್ವರ ಮಠದ ಡಾ. ಬಸವರಾಜ ದೇವರು ಸಾನ್ನಿಧ್ಯ ವಹಿಸುವರು. ಎಚ್.ಎಫ್. ಮುದಕಣ್ಣವರ ಅಧ್ಯಕ್ಷತೆ ವಹಿಸುವರು. ಶಿವಾನಂದ ಜೋಗಿನ ಪಾಲ್ಗೊಳ್ಳುವರು. ರಾಜಗುರು ಮೆಲೋಡಿ ತಂಡದವರು ದೇಶಭಕ್ತಿ ಗೀತೆ, ಜಾನಪದ ಗೀತೆ ಹಾಗೂ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು. ಇದನ್ನು ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸುವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ತಾಲೂರ, ಗುರು ಚಲವಾದಿ, ಪ್ರಭು ನವಲಗುಂದಮಠ, ಸರೋಜಾ ಛಬ್ಬಿ ಇದ್ದರು.