

ಮಂಡ್ಯ: ಪ್ರತಿ ಟನ್ ಕಬ್ಬಿಗೆ 4,500 ರೂ ಹಾಗೂ ಪ್ರತಿ ಲೀಟರ್ ಹಾಲಿಗೆ 40 ರೂ ನಿಗದಿ ಮಾಡಬೇಕೆಂದು ಆಗ್ರಹಿಸಿ ರೈತ ಸಂಘದಿಂದ ನಗರದ ಸರ್‌ಎಂವಿ ಪ್ರತಿಮೆ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ 81ನೇ ದಿನ ಪೂರೈಸಿದೆ.
ಇನ್ನು ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಬಾಯಿಗೆ ಬಟ್ಟೆ ಕಟ್ಟಿಕೊಂಡು ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಕೃಷಿಯಿಂದ ರೈತರು ಲಾಭ ಕಾಣಲು ಸಾಧ್ಯವಾಗುತ್ತಿಲ್ಲ. ಅತಿವೃಷ್ಠಿ, ಅನಾವೃಷ್ಠಿ, ಬೆಲೆ ಇಳಿಕೆ, ದಲ್ಲಾಳಿಗಳ ಮೋಸದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿಗೆ ಹಾಕಿದ ಬಂಡವಾಳವೂ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಯಾವುದೇ ಸರ್ಕಾರ ಬಂದರೂ ರೈತರ ಹೆಸರೇಳಿಕೊಂಡು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಜತೆಗೆ ಚುನಾವಣೆಗೂ ಮುನ್ನ ಇನ್ನಿಲ್ಲದ ಆಮಿಷವನ್ನು ಒಡ್ಡುತ್ತಾರೆ. ಆದರೆ ಅಧಿಕಾರಕ್ಕೆ ಬಂದ ನಂತರ ರೈತರ ಬಗ್ಗೆ ಕನಿಷ್ಟ ಕಾಳಜಿ ತೋರುವುದಿಲ್ಲ. ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಕೃಷಿಯಲ್ಲಿ ನಷ್ಟ ಕಂಡು ಯುವ ಸಮೂಹ ನಗರ, ಪಟ್ಟಣದತ್ತ ವಲಸೆ ಹೋಗುತ್ತಿದ್ದಾರೆ. ಇದಕ್ಕೆ ಕಾರಣ ಸರ್ಕಾರಗಳ ಅವೈಜ್ಞಾನಿಕ ನೀತಿಗಳೇ ಆಗಿವೆ. ಕಷ್ಟಪಟ್ಟು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದಿದ್ದರೆ ರೈತರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಖಜಾಂಚಿ ಲಿಂಗಪ್ಪಾಜಿ ಇತರರಿದ್ದರು.