

ಮಂಡ್ಯ: ಕಬ್ಬು ಹಾಗೂ ಹಾಲಿನ ದರ ನಿಗದಿ ಮಾಡುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಸರ್ ಎಂ.ವಿ ಪ್ರತಿಮೆ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬುಧವಾರ ಮೂರನೇ ದಿನ ಪೂರೈಸಿತು. ಇನ್ನು ರೈತರ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ‘ರೈತರ ಮಕ್ಕಳ ಕಷ್ಟ ಕೇಳ್ರಯ್ಯ’ ಎಂದು ಅಸಮಾಧಾನ ಹೊರಹಾಕುತ್ತಿದ್ದಾರೆ.
ಪ್ರತಿ ಟನ್ ಕಬ್ಬಿಗೆ 4,500 ರೂ ಹಾಗೂ ಪ್ರತಿ ಲೀ. ಹಾಲಿಗೆ 40 ರೂ ನಿಗದಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಈವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಸಾಮಾಜಿಕ ಜಾಲತಾಣದ ಮೂಲಕ ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ. ಮಾತ್ರವಲ್ಲದೆ, ರೈತರ ಮಕ್ಕಳ ಕಷ್ಟ ಕೇಳ್ರಯ್ಯ ಎಂದು ಪ್ರತಿಯೊಬ್ಬರೂ ತಮ್ಮ ಖಾತೆಗಳಲ್ಲಿ ಹಾಕಿಕೊಳ್ಳುವ ಮೂಲಕ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿ ಸರ್ಕಾರದ ನಡೆಯನ್ನು ಟೀಕಿಸುತ್ತಿದ್ದಾರೆ.
ಮೂರನೇ ದಿನದ ಧರಣಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ನೇತೃತ್ವದಲ್ಲಿ ಪಾಂಡವಪುರ ತಾಲೂಕಿನ ರೈತ ಸಂಘದ ಕಾರ್ಯಕರ್ತರು ಪಾಲ್ಗೊಂಡರು. ಪ್ರತಿಭಟನೆಯ ಕಾವು ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಹೋರಾಟಗಾರರು ಮಾಡುತ್ತಿರುವ ಮನವಿಗೆ ಸ್ಪಂದನೆ ಸಿಗುತ್ತಿದ್ದು, ರೈತರು ಕೂಡ ಪಾಲ್ಗೊಳ್ಳುವ ಮೂಲಕ ಧರಣಿಯನ್ನು ಬೆಂಬಲಿಸುತ್ತಿದ್ದಾರೆ. ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಅನಿರ್ದಿಷ್ಟಾವಧಿ ಚಳವಳಿ ಮುಂದುವರಿಯಲಿದೆ. ರೈತರ ಪರವಾಗಿ ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯೂ ದನಿ ಎತ್ತುತ್ತಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಇವರಿಗೆ ಅರಿವಿಲ್ಲವೇ ಎಂದು ಜನಪ್ರತಿನಿಧಿಗಳ ವಿರುದ್ಧ ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.
ಕಬ್ಬು ಹಾಗೂ ಹಾಲಿಗೆ ದರ ನಿಗದಿ ಮಾಡುವುದರ ಜತೆಗೆ ಹಳೇ ಬಾಕಿ ಪಾವತಿಸಬೇಕು. ಎಫ್‌ಆರ್‌ಪಿ ನಿಗದಿಗೆ 8.5 ಇಳುವರಿ ಮಾನದಂಡ ಮಾಡಬೇಕು. ಕೆಆರ್‌ಎಸ್ ಡ್ಯಾಂ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಷೇಧ ಮಾಡಬೇಕು. ವಿದ್ಯುತ್ ಖಾಸಗೀಕರಣ ಮಾಡುವುದನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್, ಪಾಂಡವಪುರ ತಾಲೂಕು ಮುಖಂಡರಾದ ವಿಜೇಂದ್ರ, ಬಲರಾಮ್, ಮಹಾದೇವ್, ರಾಜಶೇಖರ, ನಾಗರಾಜು, ಪ್ರಕಾಶ್, ಸ್ವಾಮಿಗೌಡ ಇತರರಿದ್ದರು.