ಸಂಸದ ಬ್ರಿಜ್‌ಭೂಷಣ್‌ಸಿಂಗ್ ಬಂಧನಕ್ಕೆ ಆಗ್ರಹ: ನಗರದಲ್ಲಿ ರೈತ ಸಂಘದಿಂದ ಪ್ರತಿಭಟನೆ

1 (4)
Published on

ಮಂಡ್ಯ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬಿಜೆಪಿ ಸಂಸದ ಬ್ರಿಜ್‌ಭೂಷಣ್‌ಸಿಂಗ್ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಬ್ರಿಜ್‌ಭೂಷಣ್‌ಸಿಂಗ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸಿರುವುದು ಅತ್ಯಂತ ಆಘಾತಕಾರಿ ಮತ್ತು ದೇಶವೇ ತಲೆ ತಗ್ಗಿಸುವಂತಹ ಘಟನೆ. ಈ ಸಂಬಂಧ ದೂರು ನೀಡಿದರೂ ಎಫ್‌ಐಆರ್ ದಾಖಲಾಗಿಲ್ಲ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರವಷ್ಟೇ ಎಫ್‌ಐಆರ್ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಪ್ರಚಾರ ಮಾಡುವ ಕೇಂದ್ರ ಸರ್ಕಾರ, ಹೀನ ಅಪರಾಧದ ಆರೋಪಿ ಬಿಜೆಪಿ ಸಂಸದನ್ನು ರಕ್ಷಿಸುತ್ತಿರುವುದು ನಾಚಿಕೆಗೇಡಿನ ವಿಷಯ. ದೂರಿನ ಆಧಾರದಲ್ಲಿ ಕಾನೂನು ಕ್ರಮ ಜರುಗಿಸಿ ನೊಂದ ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಒದಗಿಸುವುದನ್ನು ಬಿಟ್ಟು ತನ್ನ ಪೊಲೀಸ್ ಪಡೆಯನ್ನು ಬಳಸಿ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ಧಮನಕಾರಿ ಕ್ರಮ ಅನುಸರಿಸುತ್ತಿದೆ. ಆದ್ದರಿಂದ ಕೂಡಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇನ್ನು ದೆಹಲಿಯ ಮತ್ತೊಂದು ಪ್ರಕರಣದಲ್ಲಿ ಅಪ್ರಾಪ್ತೆಗೆ 21 ಬಾರಿ ಚಾಕುವಿನಿಂದ ಇರಿದು ತಲೆಯ ಮೇಲೆ ಕಲ್ಲು ಹಾಕಿ ಸಾಯಿಸಿರುವ ಘಟನೆ ಕ್ರೌರ್ಯದ ರೂಪದ ಕನ್ನಡಿಯಂತಿದೆ. ಈ ಹಿನ್ನೆಲೆಯಲ್ಲಿ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವುದರ ಜತೆಗೆ ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಶೆಟ್ಟಹಳ್ಳಿ ರವಿಕುಮಾರ್, ಬೊಮ್ಮೇಗೌಡ, ಜವರೇಗೌಡ, ದಯಾನಂದ, ಜಿ.ಪೂರ್ಣಿಮಾ, ಲೀಲಾವತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net