ಸಲ್ಲಿಕೆಯಾಗಿರುವ ಅರ್ಜಿಯನ್ನು ಮರು ಪರಿಶೀಲಿಸಿ ವರದಿ ನೀಡಿ: ಡಿಸಿ

MDK12
Published on

ಮಡಿಕೇರಿ: ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಉಪ ವಿಭಾಗೀಯ ಮಟ್ಟದಲ್ಲಿ ಅನುಮೋದನೆಯಾಗಿರುವ ಅರ್ಜಿಗಳ ಸಂಬಂಧ ಮರು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸಲಹೆ ಮಾಡಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆ ಆಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಗ್ರಾಮ ಅರಣ್ಯ ಹಕ್ಕು ಸಮಿತಿಯಲ್ಲಿ ಮತ್ತೊಂದು ಬಾರಿ ಪರಿಶೀಲಿಸುವಂತೆ ಸಲಹೆ ಮಾಡಿದರು.


ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ ಮಾತನಾಡಿ, ಜಿಲ್ಲೆಯ ನೊಕ್ಯ ಮತ್ತು ಸಿದ್ದಾಪುರ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿ ಅಭಿವೃದ್ಧಿ ಸಂಬಂಧ ಗ್ರಾಮ ಅರಣ್ಯ ಸಮಿತಿ ಗಮನಕ್ಕೆ ತರುವಂತಾಗಬೇಕು ಎಂದು ಹೇಳಿದರು. ಈ ಬಗ್ಗೆ ಮೂರು ದಿನದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಐಟಿಡಿಪಿ ಇಲಾಖಾ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.


ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಮಾತನಡಿ, ನಾಗರಹೊಳೆಯ ಆಶ್ರಮ ಶಾಲೆ ಕಟ್ಟಡ ಹಳೆಯದಾಗಿದ್ದು, ಮಳೆಗಾಲದಲ್ಲಿ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ೧೭೫ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಪ್ರಸ್ತುತ ೭೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದ್ದರಿಂದ ಕಟ್ಟಡವನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅವಕಾಶ ಮಾಡಬೇಕು. ಇಲ್ಲದಿದ್ದಲ್ಲಿ ಹತ್ತಿರದಲ್ಲಿ ಜಾಗ ಕೊಡಿಸಬೇಕು ಎಂದು ಮನವಿ ಮಾಡಿದರು.


ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಮಾತನಡಿ, ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯಾವುದೇ ಕಟ್ಟಡ ನಿರ್ಮಿಸಲು ಅವಕಾಶವಿಲ್ಲ. ಈ ಸಂಬಂಧ ಹುಲಿ ಸಂರಕ್ಷಣಾ ಯೋಜನಾ ನಿರ್ದೇಶಕರ ಜತೆ ಚರ್ಚಿಸುವಂತೆ ಸಲಹೆ ಮಾಡಿದರು.


ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ ಮಾತನಾಡಿ, ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆ ಸಂಬಂಧ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ಅನುಮೋದನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯಲಾಗಿದೆಯೇ ಎಂದು ಹೇಳಿದರು.


ಸಭೆಯಲ್ಲಿ ತಾ.ಪಂ.ಇಒಗಳಾದ ಶೇಖರ್, ಜಯಣ್ಣ, ಪೊನ್ನಂಪೇಟೆ ಐಟಿಡಿಪಿ ತಾಲೂಕು ಅಧಿಕಾರಿ ಗುರುಶಾಂತಪ್ಪ, ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಪಿಡಿಒಗಳಾದ ಶ್ಯಾಮ್(ಗುಡ್ಡೆಹೊಸೂರು), ಕಲ್ಪ ಬಿ.ಎಂ.(ನಂಜರಾಯಪಟ್ಟಣ) ಇತರರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net