ಡಿ.೭,೮ ರಂದು ಸಂವಿಧಾನ ಓದು ಅಧ್ಯಯನ

savindana odu
Published on

ಮಡಿಕೇರಿ: ಕೊಡಗು ಜಿಲ್ಲಾ ಮಟ್ಟದ ಸಂವಿಧಾನ ಓದು ಅಧ್ಯಯನ ಡಿ.೭,೮ ರಂದು ಮಡಿಕೇರಿಯ ಸುದರ್ಶನ್ ಸರ್ಕಲ್ ಸಮೀಪವಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಸಂವಿಧಾನ ಓದು ಅಭಿಯಾನದ ಸಂಚಾಲಕರಾದ ಬಿ.ರಾಜಶೇಖರ್ ಮೂರ್ತಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೦ ಗಂಟೆಗೆ ನಡೆಯುವ ಶಿಬಿರವನ್ನು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರು ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್‌ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕೊಡಗು ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಮರಾಜನ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಎರಡು ದಿನಗಳ ಕಾಲ ನಡೆಯಲಿರುವ ಸಂವಿಧಾನ ಓದು ಅಧ್ಯಯನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಗೌ.ಎಚ್.ಎನ್.ನ್ಯಾಯಮೂರ್ತಿ ನಾಗಮೋಹನದಾಸ್, ಶಾಂತಿ ನಾಗಲಾಪುರ, ಡಾ.ಗೋವಿಂದಪ್ಪ ಪಾವಗಡ, ಬಿ.ರಾಜಶೇಖರಮೂರ್ತಿ, ಆರ್.ರಾಮಕೃಷ್ಣ, ಡಾ.ಎಸ್.ವೈ.ಗುರುಶಾಂತ್ ಗೋಷ್ಠಿ ನಡೆಸಿಕೊಡಲಿದ್ದಾರೆ. ಡಿ.೮ರಂದು ಸಂಜೆ ೪ ಗಂಟೆಗೆ ಸಮಾರೋಪ ಮತ್ತು ಪ್ರಶಸ್ತಿ ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡಗೌಡ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ಬಿ.ಎಸ್.ಸತೀಶ್, ಕೊಡಗು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಖಜಾಂಚಿ ಸಿದ್ದರಾಜು ಬೆಳಯ್ಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಸಂವಿಧಾನ ಓದು ಅಭಿಯಾನ ಕರ್ನಾಟಕದಿಂದ ೧೦ ಲಕ್ಷ ಸಂವಿಧಾನ ಓದು ಪರಿಷ್ಕೃತ ಕೃತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವ ಗುರಿಯನ್ನು ಹೊಂದಲಾಗಿದೆ. ಸಂವಿಧಾನ ಓದು ಅಭಿಯಾನ ದೀರ್ಘಕಾಲ ಮುನ್ನಡೆಯುತ್ತಿದ್ದು, ಜನರ ವಿಶ್ವಾಸಗಳಿಸುತ್ತಿದೆ. ಮಾದರಿಯಾಗಿ ಸಂವಿಧಾನ ಕುರಿತು ಜನಾಂದೋಲನ ರೂಪಿಸುತ್ತಿರುವ ಸಂವಿಧಾನ ಓದು ಅಭಿಯಾನ-ಕರ್ನಾಟಕವನ್ನು ಜನತೆ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಅಭಿಯಾನದ ಸಂಚಾಲಕರಾದ ಎಚ್.ಎನ್.ಹರಿ, ಜಿ.ಟಿ.ವೆಂಕಟೇಶ್, ಜಿಲ್ಲಾ ಉಸ್ತುವಾರಿಗಳಾದ ನಂದಕುಮಾರ್, ಎಂ.ಎನ್.ರಾಜಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net