

ಶಿರಸಿ: ಇಂದಿನ ಇಂಟರ್ನೆಟ್ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಪ್ರತಿ ವಿದ್ಯಾರ್ಥಿ ಪ್ರತಿ ದಿನ ಕನಿಷ್ಠ 15ಪುಟಗಳನ್ನಾದರೂ ಓದಬೇಕು. ಓದುವುದರಿಂದ ನಮ್ಮ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯ ಸಾಹಿತಿ ರಾಜೀವ ಅಜ್ಜಿಬಳ ಹೇಳಿದರು.
ಕಸಾಪ ಶಿರಸಿ ತಾಲೂಕು ಘಟಕದ ಆಶ್ರಯದಲ್ಲಿ ಬುಧವಾರ ನಗರದ ಟಿಎಂಎಸ್ ಸಭಾಭವನದಲ್ಲಿ ಆಯೋಜಿಸಿದ್ದ 2022-23ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರು ಅಂಕ ಗಳಿಸಿದರೆ ಸಾಲದು, ಅಷ್ಟೇ ಪ್ರೀತಿಯಿಂದ ಕನ್ನಡ ಭಾಷೆಯನ್ನು ಬೆಳೆಸಬೇಕು. ವಿದ್ಯಾರ್ಥಿಗಳು ದಿನಚರಿ ಬರೆಯುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಪಂಪ ಮಹಾಕವಿಯ ನಂತರ ಅಷ್ಟು ಮಹತ್ವದ ಕವಿಗಳು ನಮಗೆ ಸಿಕ್ಕಿಲ್ಲ. ಇಂದಿನ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಕಲೆಗಳಿವೆ. ಆದರೆ, ಅದನ್ನು ಹೊರಹಾಕಲು ಮುಜುಗರ ಪಡುತ್ತಿದ್ದಾರೆ. ಇಂಗ್ಲಿಷ್ ವ್ಯಾಮೋಹದಿಂದ ಕನ್ನಡ ಭಾಷೆ ಕೇವಲ ಒಂದು ಭಾಷೆಯಾಗುತ್ತಿದೆ. ಕನ್ನಡವನ್ನು ಉಳಿಸಿ-ಬೆಳೆಸುವ ಪ್ರಯತ್ನ ವಿದ್ಯಾರ್ಥಿಗಳಿಂದ ಆಗಬೇಕು ಎಂದರು.
ಕಸಾಪ ಶಿರಸಿಘಟಕದ ಅಧ್ಯಕ್ಷ ಸುಬ್ರಾಯ ಭಟ್ ಬಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಳೆದ ವರ್ಷದಿಂದ ಕಸಾಪ ವತಿಯಿಂದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಸುತ್ತಿದೆ. ನಿರಂತರವಾಗಿ ಸಾಹಿತ್ಯ ಸೇವೆಯನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡುತ್ತಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪರಿಷತ್ ಸದಸ್ಯರಾಗಬೇಕು ಎಂದರು.
ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಅಧ್ಯಕ್ಷತೆ ವಹಿಸಿದ್ದರು. ಡಿವೈಎಸ್ಪಿ ಗಣೇಶ ಕೆ.ಎಲ್., ಶಿರಸಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಿರಸಿ ಅಧ್ಯಕ್ಷ ಸುರೇಶ ಪಟಗಾರ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಜಿ. ಹೆಗಡೆ, ಕಸಾಪ ಜಿಲ್ಲಾ ಕಾರ್ಯದರ್ಶಿ ಜಾರ್ಜ್ ಫನಾರ್ಂಡಿಸ್, ಕಸಾಪ ಯಲ್ಲಾಪುರ ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಇದ್ದರು. ಸಾಹಿತಿ ಕೃಷ್ಣ ಪದಕಿ ಸ್ವಾಗತಿಸಿದರು. ಪ್ರೊ. ಕೆ.ಎನ್. ಹೊಸ್ಮನಿ ನಿರೂಪಿಸಿದರು.