ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸಿದ್ಧ

29-KGL PHOTO-3,
Published on
  • ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

  • ತಾಲೂಕಿನ ಪಾಳ್ಯ ಗ್ರಾಮದಲ್ಲಿ 32 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯಾಲಯದ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಪಾಳ್ಯ ಗ್ರಾಮದಲ್ಲಿ ಏಳೂವರೆ ಸಾವಿರ ಜನಸಂಖ್ಯೆ ಇದೆ. ಇದು ದೊಡ್ಡ ಗ್ರಾಮವಾಗಿದ್ದು, ಇಲ್ಲಿ ಪ್ರಮುಖವಾಗಿ ಸ್ವಚ್ಛತೆ ಕೊರತೆ ಕಾಡುತ್ತಿದೆ. ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡುವುದು ಅಗತ್ಯವಾಗಿದೆ. ಈ ಹಿನ್ನೆಲೆ ಈಗಾಗಲೇ ಸಿಸಿ ರಸ್ತೆ, ಚರಂಡಿ, ಡಿಜಿಟಲ್ ಗ್ರಂಥಾಲಯ, ಸ್ಮಶಾನ ಅಭಿವೃದ್ಧಿ, ಅಂಗನವಾಡಿ, ಕೆರೆ ಹೂಳು ತೆಗೆಯುವುದು, ಸ್ವ-ಸಹಾಯ ಸಂಘದ ಕಟ್ಟಡ ನಿರ್ಮಾಣ, ಸರ್ಕಾರಿ ಶಾಲೆಯ ಆಟದ ಮೈದಾನ ಅಭಿವೃದ್ಧಿ, ಹೈಮಾಸ್ಟ್ ದೀಪ ಅಳವಡಿಕೆ ಇತರ ಅಭಿವೃದ್ಧಿ ಕಾಮಗಾರಿಗಳಿಗಾಗಿ 8.50 ಕೋಟಿ ರೂ. ಅಗತ್ಯವಿದೆ. ಮುಖ್ಯವಾಗಿ ಪಾಳ್ಯದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಮಟ್ಟದಲ್ಲೂ ಚರ್ಚಿಸಿದ್ದೇನೆ. ಮುಂದಿನ ದಿನಗಳಲ್ಲಿ ವಿಶೇಷ ಅನುದಾನ ತಂದು ಅಭಿವೃದ್ಧಿ ಪಡಿಸುತ್ತೇನೆ ಎಂದು ಭರವಸೆ ನೀಡಿದರು.

  • ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ಗುರುತು:ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿ ತ್ಯಾಜ್ಯ ಹಾಗೂ ಮನೆಗಳ ಕಸದ ಸಂಗ್ರಹಕ್ಕೆ ಹೆಚ್ಚು ಒತ್ತು ನೀಡಬೇಕು. ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

  • ಪಿಡಿಒ ಜುನೈದ್ ಅಹಮದ್ ಮಾತನಾಡಿ, ತ್ಯಾಜ ವಿಲೇವಾರಿ ಘಟಕ ಸ್ಥಾಪನೆಗೆ ಜಾಗದ ಕೊರತೆ ಇರುವುದಾಗಿ ಶಾಸಕರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಮೊದಲು ಸ್ವಚ್ಛತೆಗೆ ಆದ್ಯತೆ ನೀಡಬೇಕಿರುವ ಹಿನ್ನೆಲೆ ಸದಸ್ಯರು ಹಾಗೂ ಮುಖಂಡರು ಹಾಗೂ ಅಧಿಕಾರಿಗಳು ಸೇರಿ 15 ದಿನಗಳೊಳಗೆ ಸೂಕ್ತ ಸ್ಥಳವನ್ನು ಗುರುತಿಸಿಕೊಟ್ಟರೆ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಕ್ರಮವಹಿಸುತ್ತೇನೆ ಎಂದರು.
  • ಕಾರ್ಯಕ್ರಮದಲ್ಲಿ ಪಾಳ್ಯ ಗ್ರಾ.ಪಂ. ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಚೈತ್ರಾ, ಮಾಜಿ ಅಧ್ಯಕ್ಷ ರವಿ, ಕಾರ್ಯದರ್ಶಿ ಸಿದ್ದಯ್ಯ, ಗ್ರಾ.ಪಂ ಸದಸ್ಯರು, ತಾ.ಪಂ ಸಹಾಯಕ ನಿರ್ದೇಶಕ ಗೋಪಾಲಕೃಷ್ಣ ಮತ್ತಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net