

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀಸಾಲೂರು ಬೃಹನ್ಮಠದ ಪಟ್ಟದ ಶ್ರೀಗುರುಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಭಾನುವಾರ ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಸ್ವಾಮೀಜಿ ಹಾಗೂ ಇನ್ನಿತರ ಮಠಾಧಿಶರು ಮೈಸೂರು ಜೆಎಸ್‌ಎಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟದ ಗುರುಸ್ವಾಮೀಜಿ ಅವರು ಈ ಹಿಂದೆ 2019ರ ಕೋವಿಡ್ ಸಂದರ್ಭದಲ್ಲಿ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಾಗಿ ಅಗತ್ಯ ಚಿಕಿತ್ಸೆ ಪಡೆದಿದ್ದು, ಮಠದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಕಳೆದ ಮೂರ‌್ನಾಲ್ಕು ದಿನದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಹಾಗಾಗಿ ಅವರನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಹಿನ್ನೆಲೆ ಶ್ರೀಸಿದ್ದಲಿಂಗ ಸ್ವಾಮೀಜಿ, ಕನಕಪುರ ದೇಗುಲ ಮಠದ ಶ್ರೀಚನ್ನಬಸವ ಸ್ವಾಮೀಜಿ, ಕುಂದೂರು ಮಠದ ಶ್ರೀಶರತ್ ಚಂದ್ರ ಸ್ವಾಮೀಜಿ ಹಾಗೂ ಇತರ ಮಠಾಧೀಶರು ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು.
ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ವೈದ್ಯರಿಂದ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.