ಪಾರದರ್ಶಕತೆಯಿಂದ ನೇಮಕಾತಿ ಪ್ರಕ್ರಿಯೆ ಪೂರ್ಣ

h25-nwksrtc
Published on

ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆಯ ವಾಕರಸಾ ಸಂಸ್ಥೆಯ ಸಭಾಂಗಣದಲ್ಲಿ ಹೊಸದಾಗಿ ನೇಮಕವಾದ ಚಾಲಕರಿಗೆ ನೇಮಕಾತಿ ಪ್ರತ ವಿತರಣೆ ಹಾಗೂ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶ ಅನಾವರಣ ಕಾರ್ಯಕ್ರಮ ಬುಧವಾರ ಏರ್ಪಡಿಸಲಾಗಿತ್ತು.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಸಾಂಕೇತಿಕವಾಗಿ 46 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿದರು. ನಂತರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶ ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, 2019ರಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ದೇಶದಲ್ಲೆಡೆ ಹರಡಿದ ಕೋವಿಡ್ ಕಾರಣದಿಂದ ಸ್ಥಗಿತಗೊಂಡಿತ್ತು. ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ವಾಕರಸಾ ಸಂಸ್ಥೆಯಲ್ಲಿ ಸಾವಿರ ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ, ಬಹಳ ಯಶಸ್ವಿಯಾಗಿ ಹಾಗೂ ಸಂಪೂರ್ಣ ಪಾರದರ್ಶಕತೆಯಿಂದ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ ಎಂದರು.

ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ಮಾತನಾಡಿ, ಸಂಸ್ಥೆಗೆ ಇನ್ನೂ ಚಾಲನಾ ಸಿಬ್ಬಂದಿ ಅವಶ್ಯಕತೆ ಇದೆ. ಘಟಕಗಳ ಸುಧಾರಣೆ ಮಾಡಬೇಕಾಗಿದೆ. ಅದಕ್ಕಾಗಿ ವಿಶೇಷ ಅನುದಾನವನ್ನು ಸರ್ಕಾರದಿಂದ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಎಂ. ಪ್ರಿಯಾಂಗಾ ಪ್ರಾಸ್ತಾವಿಕ ಮಾತನಾಡಿದರು.

ಸಂಸ್ಥೆಯ ಉಪಾಧ್ಯಕ್ಷ ಪೀರಸಾಬ್ ಕೌತಾಳ, ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್, ಕಕರಸಾ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ಡಾ. ನಂದಿನಿದೇವಿ, ಇಬ್ರಾಹಿಂ ಮೈಗೂರ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net