

ಮಡಿಕೇರಿ: ಜಿಲ್ಲೆಯ ಪ್ರವಾಸಿ ಸ್ಥಳ, ಹೋಂಸ್ಟೇ ಹಾಗೂ ಹೋಟೆಲ್‌ಗಳು ಸೇರಿದಂತೆ ಎಲ್ಲೆಡೆ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇದುವರೆಗೆ ನೋಂದಣಿ ಆಗದಿರುವ ಹೋಂಸ್ಟೇಗಳು ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ನಿರ್ವಹಿಸುವ ಕುರಿತು ಜಿಲ್ಲೆಯ ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಟ್ರಾವೆಲ್ಸ್ ಏಜೆನ್ಸಿ ಸಂಸ್ಥೆಯ ಪ್ರತಿನಿಧಿಗಳ ಜತೆ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸ್ತುತ ಹೋಂ-ಸ್ಟೇ ನೋಂದಣಿ ಪ್ರಕ್ರಿಯೆಯು ಅತ್ಯಂತ ಸರಳೀಕರಣವಾಗಿದ್ದು, ಕಡಿಮೆ ಅವಧಿಯಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರಮಾಣ ಪತ್ರ ನೀಡಲಾಗುತ್ತದೆ. ಆ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯಲ್ಲಿ ಜಿಲ್ಲೆಯ ಎಲ್ಲಾ ಹೋಂ-ಸ್ಟೇಗಳು ಕಡ್ಡಾಯವಾಗಿ ಹೆಸರು ನೋಂದಾಯಿಸಬೇಕು. ಪ್ರವಾಸಿ ಸ್ಥಳಗಳಲ್ಲಿ, ಹೋಂಸ್ಟೇ, ಹೋಟೆಲ್‌ಗಳು ಸೇರಿದಂತೆ ಎಲ್ಲೆಡೆ ಸಿಸಿಟಿವಿ ಅಳವಡಿಸುವುದು, ಹೋಂಗಾರ್ಡ್‌ಗಳ ನಿಯೋಜನೆ, ರಾತ್ರಿ ವೇಳೆಯಲ್ಲಿ ಬೆಳಕು ವ್ಯವಸ್ಥೆ ಮಾಡುವುದು ಹೀಗೆ ಹಲವು ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ನೋಂದಣಿ ಆಗದಿರುವ ಹೋಂಸ್ಟೇಗಳು ಕಡ್ಡಾಯವಾಗಿ ನೋಂದಣಿ ಆಗಬೇಕು. ನೋಂದಣಿ ಮಾಡಿಕೊಂಡ ಎಲ್ಲಾ ಹೋಂಸ್ಟೇಗಳ ಮಾಹಿತಿ ಅಂತರ್ಜಾಲದಲ್ಲಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಈ ಕೆಲಸ ತುರ್ತಾಗಿ ಆಗಬೇಕಿದೆ ಎಂದರು.
ತಾ.ಪಂ.ಇಒ ಹಾಗೂ ತಹಶೀಲ್ದಾರರ ನೇತೃತ್ವದಲ್ಲಿ ಸಭೆ ನಡೆಸಿ ವ್ಯಾಪಾರ-ವಹಿವಾಟು ಪರವಾನಗಿ ನೀಡುವಾಗ ಸರ್ಕಾರದ ನಿರ್ದೇಶನಗಳನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಗಮನಿಸಬೇಕು. ನಂತರ ಪರವಾನಗಿ ನೀಡಬೇಕು. ಸ್ಥಳೀಯ ಸಂಸ್ಥೆಗಳು, ಪರವಾನಗಿ ನೀಡುವ ಸಂದರ್ಭದಲ್ಲಿ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುತ್ತಿದ್ದಾರೆಯೇ ಎಂಬುದನ್ನು ಗಮನಿಸಬೇಕು. ಇದರಿಂದ ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಒದಗಿಸಲು ಸಾಧ್ಯ ಎಂದು ವೆಂಕಟ್ ರಾಜಾ ಹೇಳಿದರು.
ಎಲ್ಲಾ ಹೋಂಸ್ಟೇಗಳು ನೋಂದಣಿಯಾಗಬೇಕೆಂಬುದು ಜಿಲ್ಲಾಡಳಿತದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ೫೦೦ ರೂ. ಪಾವತಿಸಿ ಆನ್‌ಲೈನ್ ಮೂಲಕ ನೋಂದಣಿ ಮಾಡುವಂತಾಗಬೇಕು ಎಂದ ಅವರು, ಗಡಿ ಪ್ರದೇಶಗಳಾದ ಚೇಲಾವರ, ಇರ್ಪು, ದುಬಾರೆ ಮತ್ತಿತರ ಗಡಿ ಪ್ರದೇಶದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ಮಾಡಿದರು.
ಅನಧಿಕೃತ ಹೋಂ-ಸ್ಟೇಗಳಲ್ಲಿ ನಿಯಮ ಬಾಹಿರ ಚಟುವಟಿಕೆಗಳು ಅಥವಾ ಯಾವುದೇ ರೀತಿ ದುರ್ಘಟನೆಗಳು ಸಂಭವಿಸಿದಲ್ಲಿ ಕಾನೂನು ರೀತಿಯ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲಾಗುವುದು. ಸಂಭವಿಸುವ ದುರ್ಘಟನೆಗಳಿಗೆ ಆಯಾಯ ಹೋಂ-ಸ್ಟೇ ಮಾಲೀಕರೇ ಜವಾಬ್ದಾರರಾಗುತ್ತಾರೆ. ಕಾನೂನಿನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ತುರ್ತು ಸಂದರ್ಭದಲ್ಲಿ ಜಿಲ್ಲೆಯ ಪೊಲೀಸ್ ಸಹಾಯವಾಣಿ ಸಂಖ್ಯೆ ೯೪೮೦೮೦೪೯೦೦, ಜಿಲ್ಲೆಯ ವಿಪತ್ತು ನಿರ್ವಹಣಾ ಘಟಕ ಸಂಖ್ಯೆ; ೦೮೨೭೨-೨೨೧೦೭೭ ಸಂಪರ್ಕಿಸಬಹುದಾಗಿದೆ. ಹಾಗೆಯೇ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗಾಗಿ ಅತೀ ಹೆಚ್ಚಿನ ಆದ್ಯತೆ ನೀಡಲು ಸೂಚಿಸಿದರು.
ಪ್ರವಾಸಿಗರ ಸುರಕ್ಷತೆ ಮಾರ್ಗಸೂಚಿ ಬಗ್ಗೆ ಜಿಲ್ಲೆಯ ಅಧಿಕೃತ ವೆಬ್‌ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಗಳನ್ನು ನೀಡಿ ಜಾಗೃತಿ ವಹಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಮಾತನಾಡಿ, ಜಿಲ್ಲೆಯಲ್ಲಿ ೩೫೦೦ ಕ್ಕೂ ಹೆಚ್ಚು ಹೋಂ ಸ್ಟೇಗಳು ಇದ್ದು, ಸದ್ಯ ೨೨೬೯ ಹೋಂಸ್ಟೇಗಳು ನೋಂದಣಿಯಾಗಿವೆ. ಜಿಲ್ಲೆಯಲ್ಲಿ ಪ್ರವಾಸಿ ವೆಬ್‌ಸೈಟ್ ಅಪ್‌ಡೇಟ್ ಆಗಬೇಕು. ಇದರಿಂದ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ. ಪ್ರತಿಯೊಬ್ಬರು ವೆಬ್‌ಸೈಟ್‌ನಲ್ಲಿ ಹುಡುಕುವುದರಿಂದ ಸಹಕಾರಿಯಾಗಲಿದೆ ಎಂದು ಸಲಹೆ ಮಾಡಿದರು.
ಹೋಂ ಸ್ಟೇ ಅಸೋಷಿಯೇಷನ್‌ನ ಪ್ರಮುಖರಾದ ಮೋಂತಿ ಗಣೇಶ್ ಮಾತನಾಡಿ, ಹೋಂಸ್ಟೇಗಳ ನೋಂದಣಿ ಸಂಬಂಧ ಮತ್ತಷ್ಟು ಜಾಗೃತಿ ಮೂಡಿಸಬೇಕು. ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆಗೆ ಒತ್ತು ನೀಡುವಲ್ಲಿ ಶ್ರಮಿಸಲಾಗುವುದು ಎಂದರು.
ಹೋಂ ಸ್ಟೇ ಅಸೋಷಿಯೇಷನ್‌ನ ಪ್ರಮುಖರಾದ ಅಂಬೆಕಲ್ಲು ನವೀನ್ ಮಾತನಾಡಿ, ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ಅರಿವು ಅಗತ್ಯ ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್‌ರಾಜ್, ತಹಶೀಲ್ದಾರರಾದ ಕಿರಣ್ ಗೌರಯ್ಯ, ಪ್ರವೀಣ್ ಕುಮಾರ್, ತಾ.ಪಂ.ಇಒ ಶೇಖರ್ ಇತರರು ಇದ್ದರು.