ಡಿ.19ರಂದು ಹೃದಯಿಶಿವ ಗೌರವಗ್ರಂಥ ಬಿಡುಗಡೆ: ಪ್ರಧಾನ ಸಂಪಾದಕ ಪ್ರೊ.ಎಂ.ಕೃಷ್ಣೇಗೌಡ ಹೇಳಿಕೆ

Release of Hridayishiva Tribute Mandya
Published on

ಮಂಡ್ಯ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ, ಕ್ರೆಡಲ್ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಶಿವಲಿಂಗಯ್ಯ ಅವರ ಅಭಿನಂದನೆ ಮತ್ತು ‘ಹೃದಯಿ ಶಿವ’ ಗೌರವಗ್ರಂಥ ಬಿಡುಗಡೆ ಸಮಾರಂಭವನ್ನು ನಗರದಲ್ಲಿ ಡಿ.19ರಂದು ಏರ್ಪಡಿಸಲಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ಹಾಗೂ ಗೌರವ ಗ್ರಂಥದ ಪ್ರಧಾನ ಸಂಪಾದಕ ಪ್ರೊ.ಎಂ.ಕೃಷ್ಣೇಗೌಡ ತಿಳಿಸಿದರು.

ಡಾ.ಬಿ.ಶಿವಲಿಂಗಯ್ಯ ಅವರಿಗೆ 72 ವರ್ಷ. 70 ವರ್ಷ ತುಂಬಿದ ಹಿನ್ನೆಲೆಯಲ್ಲಿ ಗೌರವಗ್ರಂಥ ಹೊರತರುವ ಹಾಗೂ ಅವರನ್ನು ಅಭಿನಂದಿಸುವ ಪ್ರಯತ್ನ ನಡೆದಿತ್ತು. ಆದರೆ, ಕೋವಿಡ್ ಕಾರಣದಿಂದ ಸಾಧ್ಯವಾಗಿರಲಿಲ್ಲ. ಇದೀಗ ಕಾರ್ಯಕ್ರಮ ಆಯೋಜಿಸಲಾಗಿದೆ. 80ಕ್ಕೂ ಹೆಚ್ಚು ಲೇಖಕರು ನೀಡಿರುವ ಲೇಖನಗಳನ್ನು ಒಳಗೊಂಡಂತೆ 400 ಪುಟಗಳ ಗೌರವಗ್ರಂಥ ಸಿದ್ಧವಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಳೆ ನೀರು ನಿರ್ವಹಣೆ ಬಗ್ಗೆ 80ರ ದಶಕದಲ್ಲೇ ವಿದೇಶದಲ್ಲಿ ಪಿಎಚ್‌ಡಿ ಮಾಡಿರುವ ಡಾ.ಬಿ.ಶಿವಲಿಂಗಯ್ಯ, ಮಾಲಿನ್ಯ ನಿಯಂತ್ರಣ ಮಂಡಳಿಯ ಕೇಂದ್ರ ಸಮಿತಿ ಸದಸ್ಯರಾಗಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಒಮ್ಮೆ ಮಂಡ್ಯ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೂ ಸ್ಪರ್ಧಿಸಿದ್ದರು. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಪ್ರಸ್ತುತ ಮಂಡ್ಯದಲ್ಲಿ ಮಾಂಡವ್ಯ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ ಎಂದು ವಿವರಿಸಿದರು.

ಇವರ ಸಾಧನೆಗಳನ್ನು ಗಮನಿಸಿ ಅವರನ್ನು ಅಭಿನಂದಿಸಲಾಗುತ್ತಿದೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂದು ಸಂಜೆ 4ಗಂಟೆಗೆ ಆಯೋಜಿಸಿರುವ ಸಮಾರಂಭದ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಹಿಸಲಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ‘ಹೃದಯಿ ಶಿವ’ ಗೌರವಗ್ರಂಥ ಬಿಡುಗಡೆ ಮಾಡಿ ಡಾ.ಬಿ.ಶಿವಲಿಂಗಯ್ಯ ಅವರನ್ನು ಅಭಿನಂದಿಸುವರು. ಚಲನಚಿತ್ರ ನಿರ್ದೇಶಕ ಡಾ.ನಾಗತಿಹಳ್ಳಿ ಚಂದ್ರಶೇಖರ್ ಅಭಿನಂದನಾ ಭಾಷಣ ಮಾಡುವರು ಎಂದು ವಿವರಿಸಿದರು.

ಅಭಿನಂದನಾ ಸಮಿತಿ ಅಧ್ಯಕ್ಷ ಡಾ.ರಾಮಲಿಂಗಯ್ಯ, ಗೌರವಾಧ್ಯಕ್ಷ ಎಂ.ಎಸ್.ಮರಿಸ್ವಾಮಿಗೌಡ, ಉಪಾಧ್ಯಕ್ಷ ಪ್ರೊ.ಜಿ.ಟಿ.ವೀರಪ್ಪ, ಕಾರ್ಯದರ್ಶಿ ಕೆ.ಚೇತನ್‌ಕೃಷ್ಣ, ಸಹ ಕಾರ್ಯದರ್ಶಿ ಕಾರಸವಾಡಿ ಮಹದೇವು, ಕೀಲಾರ ಕೃಷ್ಣೇಗೌಡ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net