ಜು.8ರಿಂದ ನಾಲೆಗಳಿಗೆ ನೀರು ಬಿಡುಗಡೆ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ

Minister Cheluvarayaswamy mandya
Published on

ಮಂಡ್ಯ: ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಮಟ್ಟ 100 ಅಡಿಗಿಂತ ಹೆಚ್ಚಾಗುತ್ತಿರುವುದರಿಂದ ಜು.6ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಜು.8ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕಳೆದ ಸಾಲಿನಲ್ಲಿ ಬರಗಾಲದ ಹಿನ್ನಲೆ ರೈತರ ಬೇಡಿಕೆಯಂತೆ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿ ತಲುಪಿದ ನಂತರ ನೀರು ಹರಿಸುವುದಾಗಿ ಭರವಸೆ ನೀಡಲಾಗಿತ್ತು. ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿದ್ದು, ರೈತರಿಗೆ ನೀರು ನೀಡಲು ತೊಂದರೆಯಾಗುತ್ತದೆ ಎಂದು ಹಲವಾರು ದೂರುಗಳು ಕೇಳಿ ಬಂದಿತ್ತು. ಇತ್ತೀಚೆಗೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಲೆಗಳಿಗೆ ನೀರು ಹರಿಸಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ 8ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಪ್ರಾರಂಭಿಸಿ ಕೊಂಡು ಉತ್ತಮ ಬೆಳೆ ಬೆಳೆಯಿರಿ. ರೈತರೊಂದಿಗೆ ಸರ್ಕಾರ ಸದಾ ಇದ್ದು, ಅವರ ಶ್ರೇಯೋಭಿವೃದ್ದಿಗೆ ಸದಾ ಚಿಂತಿಸುತ್ತದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net