

ಹಾಸನ: ಅಭಿವೃದ್ಧಿ ನಿಗಮಗಳಿಗೆ ಹೆಚ್ಚು ಅನುದಾನ ನೀಡಿ ಸಾಲ ಕೊಟ್ಟಿದ್ದರೆ, ಜನರು ಮೈಕ್ರೋ ಫೈನಾನ್ಸ್ ಮೊರೆ ಹೋಗುತ್ತಿರಲಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 45 ಕೋಟಿ ರೂ. ನೀಡಿದೆ. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 50 ಕೋಟಿ ರೂ. ನೀಡಿದೆ. ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಗ್ಯಾರಂಟಿ ಬಗ್ಗೆ ಹೇಳಿದ್ದಕ್ಕೆ ಬಾಯಿ ಬಡಿದುಕೊಂಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ 1.5 ಲಕ್ಷ ಕೋಟಿ ರೂ. ಗೂ ಅಧಿಕ ಸಾಲವನ್ನು ಕಾಂಗ್ರೆಸ್ ಸರ್ಕಾರ ಮಾಡಲಿದೆ ಎಂದು ಆರ್. ಅಶೋಕ್ ಆರೋಪಿಸಿದರು.
ತುರ್ತಾಗಿ ನಿಗಮಗಳಿಗೆ 5,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಜನರಿಗೆ ಸಾಲ ಕೊಟ್ಟರೆ ಅನುಕೂಲವಾಗುತ್ತದೆ. ಜತೆಗೆ ಇರುವ ಕಾನೂನನ್ನೇ ಬಳಸಿ ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಬೇಕು. ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್ ಸಮ್ಮಾನ್ ಸೇರಿದಂತೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಅದೇ ರೀತಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಳಸಬೇಕು. ಅಭಿವೃದ್ಧಿ ಕಾರ್ಯಕ್ಕೆ 80,000 ಕೋಟಿ ರೂ. ಸಿಗುತ್ತದೆ. ಅದರಲ್ಲಿ 55,000 ಕೋಟಿ ರೂ. ಅನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಇನ್ನುಳಿದ ಹಣದಲ್ಲಿ ಅಭಿವೃದ್ಧಿ ಹೇಗಾಗುತ್ತದೆ? ಶಾಸಕ ಬಿ.ಆರ್.ಪಾಟೀಲ್ ಇದನ್ನೇ ಪ್ರಶ್ನೆ ಮಾಡಿ ರಾಜೀನಾಮೆ ನೀಡಿದ್ದಾರೆ ಎಂದರು.