ವಿದ್ಯಾರ್ಥಿ ವೇತನ ಶೀಘ್ರ ಬಿಡುಗಡೆಗೊಳಿಸಿ

BIRUR protest
ಬೀರೂರಿನಲ್ಲಿ ಎಬಿವಿಪಿ ಕಾರ್ಯಕರ್ತರು ನಾಡ ಕಚೇರಿ ಉಪತಹಸೀಲ್ದಾರ್ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು. ರವಿತೇಜ, ರೋಹಿತ್, ವನಿತಾ, ವಿದ್ಯಾ, ಕಾಲೇಜು ವಿದ್ಯಾರ್ಥಿಗಳು ಇದ್ದರು.
Published on

ಬೀರೂರು: ರಾಜ್ಯದಲ್ಲಿ 4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ 2022-23ನೇ ಸಾಲಿನ ವಿದ್ಯಾರ್ಥಿ ವೇತನ ತಡೆ ಹಿಡಿದಿದೆ. ಶೀಘ್ರವೇ ವೇತನ ಬಿಡುಗಡೆಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೀರೂರು ಘಟಕದ ಕಾರ್ಯಕರ್ತರು ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಎಸ್‌ಎಸ್‌ಪಿ ತತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಮಂಜೂರಾಗಿದ್ದರೂ ವಿದ್ಯಾರ್ಥಿಗಳ ಖಾತೆಗೆ ಹಣ ಜಮಾವಾಗಿಲ್ಲ. ಹಣ ಜಮವಾಗುವ ಮೊದಲೇ ಮುಂದಿನ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟುಮಾಡಿದೆ ಎಂದು ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ಚಂದು ಅಸಮಾಧಾನ ವ್ಯಕ್ತಪಡಿಸಿದರು.
ಎಸ್‌ಎಸ್‌ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ, ಇತರ ಇಲಾಖೆಗಳ ಅಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯಾರ್ಥಿ ವೇತನ ನೀಡದೆ ವಿದ್ಯಾರ್ಥಿಗಳ ಶಿಕ್ಷಣ ಅತಂತ್ರ ಸ್ಥಿತಿಗೆ ತರುವ ಕೆಲಸ ಮಾಡಿದೆ. ರೈತ ವಿದ್ಯಾನಿಧಿ ವೇತನವನ್ನೂ ತಡೆಹಿಡಿದಿದೆ. ವಿದ್ಯಾರ್ಥಿ ವೇತನದಲ್ಲೂ ರಾಜಕೀಯ ತೋರುತ್ತಿದೆ ಎಂದು ದೂರಿದರು.
ಎಬಿವಿಪಿ ಘಟಕದ ರವಿತೇಜ, ರೋಹಿತ್, ಮಿಥುನ್, ರಜಿತ್, ವನಿತಾ, ವಿದ್ಯಾ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net