ನಿತ್ರಾಣಗೊಂಡ ಪೌರಾಯುಕ್ತೆ! ಕಾರಣವಾಯ್ತಾ ಅಧಿಕ ಕಾರ್ಯದೊತ್ತಡ? | Chikkaballapur

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ (1)
Published on

Chikkaballapur: ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಾ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೇಳೆಯಲ್ಲಿಯೇ ಅಸ್ವಸ್ಥಗೊಂಡಿದ್ದರಿಂದ ಕಚೇರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕಚೇರಿಯಲ್ಲಿ ಇ-ಖಾತೆ ಕಡತಗಳ ವಿಲೇವಾರಿ ಮಾಡುತ್ತಿದ್ದ ಅವರು, ಏಕಾಏಕಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸಿಬ್ಬಂದಿ ಮತ್ತು ನಗರಸಭೆಯ ಕೆಲ ಸದಸ್ಯರು ಖಾಸಗಿ ಆಸ್ಪತ್ರೆಯ ವೈದ್ಯರನ್ನು ಕರೆಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಆಂಬುಲೆನ್ಸ್‌ನಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ವಿಷಯ ತಿಳಿಯುತ್ತಿದ್ದಂತೆ ನಗರಸಭೆ ಕಚೇರಿ ಮುಂದೆ ಜನ ಜಂಗುಳಿ ನೆರೆದಿತ್ತು. ಜಿಲ್ಲಾ ಯೋಜನಾಧಿಕಾರಿ ಸೇರಿದಂತೆ ಅನೇಕ ಅಧಿಕಾರಿಗಳು, ನಗರಸಭೆ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ಪೌರಾಯುಕ್ತರ ಆರೋಗ್ಯ ವಿಚಾರಿಸಿದರು.

ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇ-ಖಾತೆಗಳ ವಿಲೇವಾರಿ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಕೇಳಿದ್ದು, ವಿಲೇವಾರಿ ಕುಂಠಿತಗೊಂಡ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇತ್ತೀಚೆಗಷ್ಟೆ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದ ಅಮೃತಾ ಎರಡು ಮೂರು ದಿನಗಳಿಂದ ಬಿಡುವಿಲ್ಲದೆ ಕಡತಗಳ ವಿಲೇವಾರಿಯಲ್ಲಿ ತೊಡಗಿದ್ದು, ನಿತ್ರಾಣಕ್ಕೆ ಅದೇ ಕಾರಣವಿರಬಹುದು ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net