ಧರ್ಮಾಧಾರಿತ ಮೀಸಲಾತಿ ಸಲ್ಲ

2
ಕೋಲಾರ ನಗರದ ಬಸ್​ ನಿಲ್ದಾಣದ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.ಮಾಜಿ ಶಾಸಕ ವೈ.ಸಂಪಂಗಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ವಿ ಮಹೇಶ್​, ಅಪ್ಪಿರಾಜು, ಮಾವು ಮಂಡಳಿ ಮಾಜಿ ಅಧ್ಯಕ್ಷ ವಾಸುದೇವ್​, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಆನಂದ್​ ಇದ್ದರು.
Published on

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಅವಕಾಶ ಖಂಡಿಸಿ ಬಿಜೆಪಿ ಪ್ರತಿಭಟನೆ

ಕೋಲಾರ: ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ಹಾಗೂ 18 ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದನ್ನು ಖಂಡಿಸಿ, ಜಿಲ್ಲಾ ಬಿಜೆಪಿ ಟಕದಿಂದ ನಗರದ ಹೊಸ ಬಸ್​ ನಿಲ್ದಾಣದ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಮಾಜಿ ಸಂಸದ ಎಸ್​.ಮುನಿಸ್ವಾಮಿ ಮಾತನಾಡಿ, ಕಾಂಗ್ರೆಸ್​ ಸರ್ಕಾರವು ಮುಸ್ಲಿಂ ಸಮುದಾಯವನ್ನು ಓಲೈಸಲು ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ಘೋಷಣೆ ಮಾಡಿ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಮತಬ್ಯಾಂಕ್​ ಭದ್ರಪಡಿಸಿಕೊಳ್ಳುವ ಉದ್ದೇಶದಿಂದ ಸರ್ಕಾರಿ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿಯನ್ನು ಮುಸ್ಲಿಂರಿಗೆ ನೀಡುವುದು, ವಿದ್ಯಾಭ್ಯಾಸಕ್ಕಾಗಿ ಹೊರ ದೇಶಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಸಹಾಯಧನವನ್ನು 20 ಲಕ್ಷದಿಂದ 30 ಲಕ್ಷ ರೂ.ಗೆ ಹೆಚ್ಚಳ, ಶಾದಿ ಭಾಗ್ಯಕ್ಕೆ ಮತ್ತಷ್ಟು ಪೋತ್ಸಾಹ, ಮುಸ್ಲಿಂ ಹೆಣ್ಣುಮಕ್ಕಳ ಆತ್ಮರಕ್ಷಣೆಗಾಗಿ ವಿಶೇಷ ಅನುದಾನ ನೀಡುವ ಮೂಲಕ ತುಷ್ಟೀಕರಣದ ರಾಜಕಾರಣವನ್ನು, ಹಳೇ ಚಾಳಿಯನ್ನು ಕಾಂಗ್ರೆಸ್​ ಮುಂದುವರೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಸಭಾಪತಿ ಯು.ಟಿ.ಖಾದರ್​ ಅವರು ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವುದು ಕಾನೂಬಾಹಿರ. ಅಸಂವಿಧಾನಾತ್ಮಕ, ಏಕಪಕ್ಷೀಯ ತೀಮಾರ್ನ. ಜನರಿಂದ ಆಯ್ಕೆಯಾದ ಶಾಸಕರಿಗೆ, ಕ್ಷೇತ್ರದ ಮತದಾರರಿಗೆ ಮಾಡಿದ ಅಪಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ಧರ್ಮಾಧಾರಿತ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಆದರೂ ಕಾಂಗ್ರೆಸ್​ ಸರ್ಕಾರ ಜಾರಿಗೊಳಿಸಿರುವ ಜಾತಿ ಆಧಾರಿತ ನಿರ್ಧಾರಗಳು ಸಂವಿಧಾನಕ್ಕೆ ಮಾಡಿದ ಅಪಮಾನದಂತೆ. ಜನ ವಿರೋಧಿ ನಿರ್ಧಾರಗಳನ್ನು ಹಿಂದಕ್ಕೆ ಪಡೆಯದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ವೈ.ಸಂಪಂಗಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ವಿ ಮಹೇಶ್​, ಅಪ್ಪಿರಾಜು, ಮಾವು ಮಂಡಳಿ ಮಾಜಿ ಅಧ್ಯಕ್ಷ ವಾಸುದೇವ್​, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಆನಂದ್​, ಮುಖಂಡರಾದ ಕೆಂಬೋಡಿ ನಾರಾಯಣಸ್ವಾಮಿ, ಅರುಣಮ್ಮ, ಮಮತಮ್ಮ, ಚಿನ್ನಸ್ವಾಮಿಗೌಡ ಪಾಲ್ಗೊಂಡಿದ್ದರು.

ಪೊಲೀಸ್​, ಕಾರ್ಯಕರ್ತರ ನಡುವೆ ವಾಗ್ವಾದ

ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಲು ಮುಂದಾದರು. ಆಗ ಮಧ್ಯ ಪ್ರವೇಶಿಸಿದ ಪೊಲೀಸರು, ಸಿಎಂ ಪ್ರತಿಕೃತಿ ಸುಡಬಾರದು ಎಂದು ಮನವಿ ಮಾಡಿದರು. ಆದರೂ ಪಟ್ಟು ಬಿಡದ ಬಿಜೆಪಿಗರು ಪ್ರತಿಕೃತಿ ಸುಡಲು ಮುಂದಾದರು. ಆಗ ಸ್ಥಳದಲ್ಲಿದ್ದ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಸರ್ಕಲ್​ ಇನ್ಸ್​ಪೆಕ್ಟರ್​ ಶಿವಾನಂದ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net