ಧರ್ಮಸ್ಥಳದಲ್ಲಿ ಧರ್ಮ ಕಾರ್ಯಗಳು ನಿರಂತರ

11KMD-1
ಕೆ.ಎಂ.ದೊಡ್ಡಿಯ ಭಾರತೀ ವಿದ್ಯಾ ಸಂಸ್ಥೆಯ ಕುವೆಂಪು ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳನ್ನು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ವಿತರಣೆ ಮಾಡಿದರು.
Published on

ಕೆ.ಎಂ.ದೊಡ್ಡಿ: ಧರ್ಮಸ್ಥಳದಿಂದ ಧರ್ಮ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು, ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಕಾರ್ಯ ವೈಖರಿಗೆ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ತಿಳಿಸಿದರು.

ಇಲ್ಲಿನ ಭಾರತೀ ವಿದ್ಯಾ ಸಂಸ್ಥೆಯ ಕುವೆಂಪು ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳದ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಹಲವು ಜನಪಯೋಗಿ ಕಾರ್ಯಕ್ರಮಗಳು ನಡೆಯುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಉನ್ನತ ವ್ಯಾಸಂಗ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವ ಅರ್ಹರು ಭಾರತೀ ವಿದ್ಯಾ ಸಂಸ್ಥೆಯಲ್ಲಿ ಗ್ರಂಥಾಲಯದ ಪ್ರಯೋಜನ ಪಡೆಯಬಹುದು. ಜತೆಗೆ ಉತ್ತಮ ಲ್ಯಾಬ್‌ಗಳಿದ್ದು ಅವಶ್ಯಕತೆ ಇದ್ದರೆ ಅದನ್ನು ಬಳಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ನನ್ನ ತಂದೆ ದಿವಂಗತ ಜಿ.ಮಾದೇಗೌಡ ಅವರು ಶಿಕ್ಷಣ, ಆರೋಗ್ಯ, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳ ಬೆಳವಣಿಗೆಗೆ ತನ್ನದೆ ಆದ ಛಾಪು ಮೂಡಿಸಿದ್ದು ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಹಲವರಿಗೆ ದಾರಿ ದೀಪವಾಗಿದ್ದು ಆ ಕಾರ್ಯಗಳನ್ನು ನಾನು ಮುಂದುವರಿಸುತ್ತಿದ್ದೆನೆ ಎಂದರು.

ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸಮಾಜಮುಖಿ ಕೆಲಸಗಳಲ್ಲಿ ಒಂದಾದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಎಲ್ಲ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲೆಂದು ಶುಭ ಹಾರೈಸಿದರು.

ಯೋಜನೆಯ ಜಿಲ್ಲಾ ನಿರ್ದೇಶಕಿ ಎಂ.ಚೇತನಾ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕರ್ನಾಟಕ ರಾಜ್ಯದಲ್ಲಿ ಈವರೆಗೆ ಒಟ್ಟು 1,25,010 ವಿದ್ಯಾರ್ಥಿಗಳಿಗೆ 153 ಕೋಟಿ ರೂ. ಮೊತ್ತ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರು ಮಾಡುತಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಬಳಸಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಭಾರತೀನಗರ ಯೋಜನಾ ಕಚೇರಿಗೆ ಸಂಬಂಧಪಟ್ಟಂತೆ ಈ ವರ್ಷ 221 ವಿದ್ಯಾರ್ಥಿಗಳಿಗೆ ಹೊಸದಾಗಿ ಶಿಷ್ಯವೇತನ ಮಂಜೂರಾಗಿದೆ ಮತ್ತು 260 ಹಳೆಯ ವಿದ್ಯಾರ್ಥಿಗಳಿಗೆ ರಿನೀವಲ್ ಮಾಡಲಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ತಿಳಿಸಿದರು.

ರಾಜ್ಯದಲ್ಲಿ ಶಿಕ್ಷಕರ ಕೊರತೆ ಎದುರಿಸುತ್ತಿರುವ ಸರ್ಕಾರಿ / ಅನುದಾನಿತ ಶಾಲೆಗಳಿಗೆ ಜ್ಞಾನದೀಪ ಕಾರ್ಯಕ್ರಮದ ಮೂಲಕ 10340 ಗೌರವ ಶಿಕ್ಷಕ / ಶಿಕ್ಷಕಿಯರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಯೋಜನೆಯಿಂದ ಮಂಜೂರಾದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಜನಜಾಗೃತಿ ಸದಸ್ಯ ಕ್ಯಾತಘಟ್ಟ ರವಿಕುಮಾರ್, ಜಿಲ್ಲಾ ಜನಜಾಗೃತಿ ಸದಸ್ಯೆ ಧರಣಿ ಪುಟ್ಟೇಗೌಡ, ಯೋಜನಾಧಿಕಾರಿ ಸುವರ್ಣ ಗಣಪತಿ ಭಟ್‌ಮ ಮೇಲ್ವಿಚಾರಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net