

ಮಂಡ್ಯ: ಜಿಲ್ಲೆಯಲ್ಲಿ ಜ.26ರಂದು ಗಣರಾಜ್ಯೋತ್ಸವವನ್ನು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು. ಪದವಿ ಪೂರ್ವ ಕಾಲೇಜು ಹಾಗೂ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ವಿದ್ಯಾರ್ಥಿಗಳೊಂದಿಗೆ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರಿ ಕಚೇರಿಗೆ ದೀಪಾಲಂಕಾರ ಮಾಡಿ ವಿಶೇಷವಾಗಿ ಗಣರಾಜ್ಯೋತ್ಸವವನ್ನು ಆಚರಿಸಿ. ಕಾರ್ಯಕ್ರಮದ ಕೆಲಸಗಳು ಸುಸೂತ್ರವಾಗಿ ನಡೆಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಪರೇಡ್ ಸಮಿತಿ, ಸಾಂಸ್ಕೃತಿಕ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಿ ಜವಾಬ್ದಾರಿ ಹಂಚಿಕೆ ಮಾಡಬೇಕು. ಸ್ವಾಗತ ಸಮಿತಿ ತಪ್ಪದೇ ಕನ್ನಡಪರ ಸಂಘ ಸಂಸ್ಥೆ ಹಾಗೂ ಸಂಘಟನೆ, ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಿ ಅವರನ್ನು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಿ. ಪೊಲೀಸ್, ಗೃಹರಕ್ಷಕ, ಅಬಕಾರಿ, ಎನ್‌ಸಿಸಿ, ಎನ್‌ಎಸ್‌ಎಸ್ ಸೇರಿದಂತೆ ಸುಮಾರು 30 ತಂಡ ಪಥ ಸಂಚಲನ ನೀಡಲು ಪೂರ್ವಾಭ್ಯಾಸ ನಡೆಸಿ. ಪಥ ಸಂಚಲನ ಉತ್ತಮವಾಗಿ ಮೂಡಿಬರುವಂತೆ ನೋಡಿಕೊಳ್ಳಿ. ಕಾರ್ಯಕ್ರಮದಲ್ಲಿ ವಿಭಿನ್ನ ಹಾಗೂ ಆಕರ್ಷಿತವಾಗಿ ದೇಶಭಕ್ತಿ ಹಾಡುಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ರೆಡ್‌ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಅಗ್ನಿಶಾಮಕದಳದ ಅಧಿಕಾರಿ ರಾಘವೇಂದ್ರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.