

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಅಂಬಲಾರೆ ಗ್ರಾಮದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಕೊಳವೆಬಾವಿಗೆ ಸಮರ್ಪಕವಾದ ವಿದ್ಯುತ್ ನೀಡುತ್ತಿಲ್ಲ ಎಂದು ಎಇಇ ಪ್ರಶಾಂತ್ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಮುಖಂಡ ಕೆ.ಕೃಷ್ಣೇಗೌಡ ಮಾತನಾಡಿ, ನಮ್ಮ ಭಾಗದಲ್ಲಿ ಅತಿ ಹೆಚ್ಚಾಗಿ ಕೊಳವೆ ಬಾವಿಯನ್ನು ಆಧರಿಸಿ ಬೇಸಾಯ ಮಾಡುತ್ತಿರುವ ರೈತರಿಗೆ ಕಳೆದ ಹಲವು ದಿನಗಳಿಂದ ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಅವರ ಜಮೀನಿನ ಬೆಳೆಗಳೆಲ್ಲವೂ ಒಣಗುತ್ತಿವೆ. ಜಾನುವಾರುಗಳಿಗೂ ಕುಡಿಯುವ ನೀರಿನ ವ್ಯವಸ್ಥೆ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಕೊಳವೆ ಬಾವಿಗೆ ವಿದ್ಯುತ್ ಸಮರ್ಪಕವಾಗಿ ನೀಡುವಂತೆ ಹಲವು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ಸೂಕ್ತ ಮಾಹಿತಿ ಸಿಗುತ್ತಿಲ್ಲ
ಹಾಗಾಗಿ ಗ್ರಾಮಸ್ಥರೆಲ್ಲರೂ ಕಚೇರಿಗೆ ಆಗಮಿಸಿ ಮುಂದಿನ ದಿನಗಳಲ್ಲಿ ಈ ರೀತಿ ತೊಂದರೆಯಾಗದಂತೆ ಕ್ರಮ ವಹಿಸಲು ಮನವಿ ಪತ್ರ ಸಲ್ಲಿಸಿದ್ದೇವೆ ಎಂದು ತಿಳಿಸಿದರು. ಹೀಗೆ ವಿದ್ಯುತ್ ಸಮಸ್ಯೆ ಮುಂದುವರಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಭರವಸೆ: ಮನವಿ ಸ್ವೀಕರಿಸಿ ಮಾತನಾಡಿದ ಎಇಇ ಪ್ರಶಾಂತ್, ಕಳೆದ ಕೆಲವು ದಿನಗಳಿಂದ ಲೋಡ್ ಶೆಡ್ಡಿಂಗ್, ಉಪಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಶಿಫ್ಟಿಂಗ್ ಸಮಸ್ಯೆ ಇದೆ. ಹಾಗಾಗಿ ಈ ಭಾಗಕ್ಕೆ ನಿಗದಿತ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಮುಂಬರುವ ದಿನದಲ್ಲಿ ಸಮರ್ಪಕವಾದ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮುಖಂಡರಾದ ನಾಗರಾಜು, ಮಂಜು, ಗಣೇಶ್, ರವಿ, ಮಂಜು, ಪ್ರಸನ್ನ, ಜಯಣ್ಣ ಉಪಸ್ಥಿತರಿದ್ದರು.