

ಮೈಸೂರು: ವಲಸೆ ಕಾರ್ಮಿಕರನ್ನು ರಕ್ಷಿಸುವಂತೆ ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.
ಯಾವುದೇ ಪೂರ್ವತಯಾರಿ ಹಾಗೂ ಸಿದ್ಧತೆ ಕೈಗೊಳ್ಳದೆ ಲಾಕ್‌ಡೌನ್ ಮಾಡಿದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ಕಂಗಾಲಾಗಿದ್ದಾರೆ. ಜತೆಗೆ ಉದ್ಯೋಗ ಕಳೆದುಕೊಂಡು ನಿರ್ಗತಿಕರಾಗಿದ್ದು, ಊಟ ಮತ್ತು ವಸತಿ ಇಲ್ಲದೆ ಶೋಚನೀಯ ಸ್ಥಿತಿ ತಲುಪಿದ್ದಾರೆ. ಸರ್ಕಾರ ಕೈಗೊಂಡ ಕ್ರಮಗಳು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಾಗಿದೆ.
ಹೀಗಾಗಿ ವಲಸೆ ಕಾರ್ಮಿಕರು ಅನಿವಾರ್ಯವಾಗಿ ಕಾಲ್ನಡಿಗೆಯಲ್ಲಿ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇವರ ಸಂಕಷ್ಟಕ್ಕೆ ಸರ್ಕಾರ ಕೂಡಲೆ ಸ್ಪಂದಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ.ರವಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.