ಅಕ್ರಮ ಗಣಿಗಾರಿಕೆ ತಡೆಗಟ್ಟುವಂತೆ ಒತ್ತಾಯಿಸಿ ಮನವಿ

2 ckm 1
ಚಿಕ್ಕಮಗಳೂರು ಎಡಿಸಿ ನಾರಾಯಣ ರಡ್ಡಿಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಪದಾಧಿಕಾರಿಗಳು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸುತ್ತಿರುವ ಬಸ್ ನಿಲ್ದಾಣದ ಕಾಮಗಾರಿಗಳನ್ನು ತಡೆಗಟ್ಟುವಂತೆ ಒತ್ತಾಯಿಸಿದರು. ಸೋಮು ನಾಯಕ್, ವಿನಯ್ ಬಾಬು, ಸೋನಿ ಕೋಡಿಹಳ್ಳಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸುತ್ತಿರುವ ಬಸ್ ನಿಲ್ದಾಣದ ಕಾಮಗಾರಿಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಪದಾಧಿಕಾರಿಗಳು ಎಡಿಸಿ ನಾರಾಯಣ ರಡ್ಡಿಕನಕರಡ್ಡಿ ಅವರ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕಡೂರು ತಾಲೂಕಿನ ನಾಗೋಡನಹಳ್ಳಿ ಕೆರೆ ದೋಗಿಹಳ್ಳಿ ಕೆರೆ ಮತ್ತು ಕೆ.ಚಟ್ಟನಹಳ್ಳಿ ಕೆರೆಯಲ್ಲಿ ಸರ್ಕಾರದ ಯಾವುದೇ ಪರವಾನಗಿ ಇಲ್ಲದೆ ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಇದರಿಂದ ಅಲ್ಲಿನ ಸಂಪನ್ಮೂಲ ನಾಶವಾಗುತ್ತಿರುವುದರ ಜೊತೆಗೆ ದಟ್ಟ ದೂಳಿನಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಆರೋಪಿಸಿದರು
ನೂತನವಾಗಿ ನಿರ್ಮಿಸುತ್ತಿರುವ ಕಡೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದಾಗಿ ಪ್ರತಿದಿನ ಅಪಘಾತಗಳಾಗುತ್ತಿದ್ದು ಇದುವರೆಗೆ ಹತ್ತು ಜನ ಸಾವನ್ನಪ್ಪಿದ್ದಾರೆ ಎಂದು ದೂರಿದರು.
ತಂಗಲಿ ಗ್ರಾಮದ ಬಳಿ ನಿರ್ಮಿಸಿರುವ ಬಸ್ ನಿಲ್ದಾಣ ಸೇರಿದಂತೆ ಅವೈಜ್ಞಾನಿಕವಾಗಿ ಕಟ್ಟಲಾಗಿರುವ ಬಸ್ ನಿಲ್ದಾಣಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು
ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಪದಾಧಿಕಾರಿಗಳು, ಅಕ್ರಮ ಗಣಿಗಾರಿಕೆ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಮನವಿಗೆ ಸ್ಪಂದಿಸದಿದ್ದಲ್ಲಿ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ರಾಜ್ಯಾಧ್ಯಕ್ಷ ಸೋಮು ನಾಯಕ್, ಕಡೂರು ತಾಲೂಕು ಅಧ್ಯಕ್ಷ ವಿನಯ್ ಬಾಬು, ಸಂಘಟನಾ ಕಾರ್ಯದರ್ಶಿ ಸೋನಿ ಕೋಡಿಹಳ್ಳಿ, ತಾಲೂಕು ಉಪಾಧ್ಯಕ್ಷ ಜಿ. ಸುಧೀನ್ ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net