

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹೊರಗುತ್ತಿಗೆ ಆಧಾರದ ನೇಮಕಾತಿಯಲ್ಲೂ ರಾಜ್ಯ ಸರ್ಕಾರ ಮೀಸಲಾತಿ ಕಲ್ಪಿಸಿ ಅಧಿಕೃತ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಚಿವ ಸಂಪುಟ ಸಭೆ ಕೈಗೊಂಡಿದ್ದ ನಿರ್ಣಯ ಆಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಡಾಟಾ ಎಂಟ್ರಿ ಆಪರೇಟರ್, ವಾಹನ ಚಾಲಕರು, ಗ್ರೂಪ್-ಡಿ ಹಾಗೂ ಸ್ವಚ್ಛತಾ ಸಿಬ್ಬಂದಿ ಒಳಗೊಂಡು ಎಲ್ಲ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲಿ ಇನ್ನು ಮುಂದೆ ಮೀಸಲು ನಿಯಮ ಪಾಲನೆ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.
ಇದರಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾಗಿ ಕಡ್ಡಾಯವಾಗಿದ್ದು, ಎಲ್ಲ ಇಲಾಖೆಗಳು, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳಿಗೂ ಇದು ಅನ್ವಯವಾಗಲಿದೆ. ಇದರಿಂದ ಮಹಿಳಾ ಸಬಲೀಕರಣದೊಂದಿಗೆ ಅಹಿಂದ ವರ್ಗಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶ ದೊರಕಿದಂತಾಗಲಿದೆ ಎಂದು ಹೇಳಿದ್ದಾರೆ.