

ಬೆಂಗಳೂರು: ಬಿಬಿಎಂಪಿ ಚುನಾವಣೆಗಾಗಿ ವಾರ್ಡ್ವಾರು ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸಿ ಎರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ಅನುಕೂಲವಾಗುವಂತೆ ವಾರ್ಡ್ ಮರು ವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿ, ವಾರ್ಡ್ವಾರು ಮೀಸಲಾತಿ ಕರಡು ಪಟ್ಟಿಯನ್ನು ಸೆ.14ರಂದು ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ 900ಕ್ಕೂ ಅಧಿಕ ಆಕ್ಷೇಪಣೆಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿ ಪ್ರಕಟಿಸಲು ಎರಡು ವಾರ ಕಾಲಾವಕಾಶ ಅಗತ್ಯವಿದೆ ಎಂದು ನ್ಯಾಯಪೀಠಕ್ಕೆ ಕೋರಿದರು.
ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿ, ಅ.19ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ನ.30ಕ್ಕೆ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅದನ್ನು ದಾಖಲಿಸಿಕೊಂಡ ಪೀಠ, ಅ.12ಕ್ಕೆ ವಿಚಾರಣೆ ಮುಂದೂಡಿತು.