ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ: ಸಚಿವ ಸುನಿಲ್ ಕುಮಾರ್

IMG-20211101-WA0014
Published on

ಉಡುಪಿ: ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುವುದು. ಶೀಘ್ರದಲ್ಲೇ ಕಾನೂನು ಚೌಕಟ್ಟು ರೂಪಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.

ಸೋಮವಾರ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ  ನಡೆದ ಜಿಲ್ಲಾ ಮಟ್ಟದ 66ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿದರು.

ಕನ್ನಡಿಗರಿಗೆ ಉದ್ಯೋಗ ಸೇರಿದಂತೆ ನಾಡಿನಲ್ಲಿ ಕನ್ನಡಿಗರಿಗೆ ಆದ್ಯತೆ ಕಲ್ಪಿಸುವ ನಿಟ್ಟಿನಲ್ಲಿ  ಸರೋಜಿನಿ ಮಹಿಷಿ ವರದಿಯಲ್ಲಿ ಸಣ್ಣ ತಿದ್ದುಪಡಿ ಮಾಡಬೇಕಾಗಿದೆ. ಕರ್ನಾಟಕ ಔದ್ಯಮಿಕ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸಲು ನಮ್ಮ ಸರ್ಕಾರ ಕಾನೂನು ರೂಪಿಸಲಿದೆ ಎಂದರು.

ಏಕರೂಪ ನಿಯಮಾವಳಿ
ರಾಜ್ಯದಲ್ಲಿ ಈ ಬಾರಿ ಸಾಧಕರನ್ನು ಪ್ರಶಸ್ತಿ ಹುಡುಕಿಕೊಂಡು ಬಂದಿದೆ. ಅದೇ ರೀತಿ ಜಿಲ್ಲೆಗಳಲ್ಲೂ ಎಲೆಮರೆಯ ಸಾಧಕರನ್ನು ಗುರುತಿಸುವ ಕಾರ್ಯ ನಡೆಯಬೇಕು. ಆದರೆ ಈ ಬಗ್ಗೆ ಸರ್ಕಾರದಲ್ಲಿ ಯಾವುದೇ ಸುತ್ತೋಲೆಗಳಿಲ್ಲ. ಹೀಗಾಗಿ ಮುಂದಿನ ವರ್ಷದಿಂದ  ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಏಕರೂಪದ ನಿಯಮ ಜಾರಿಗೊಳಿಸಲಾಗುವುದು ಎಂದರು .

ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಡಾ. ನವೀನ ಭಟ್, ಎಸ್.ಪಿ. ವಿಷ್ಣುವರ್ಧನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ 32 ಮಂದಿ  ಸಾಧಕರು ಮತ್ತು 3 ಸಂಘಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net