

ಮಡಿಕೇರಿ: ರಾಜ್ಯದಲ್ಲಿ ವಸತಿ ಶಾಲೆಗಳ ಶಿಕ್ಷಣದ ಗುಣಮಟ್ಟ ಮತ್ತು ಫಲಿತಾಂಶ ಉತ್ತಮವಾಗಿದ್ದು, ಬೇಡಿಕೆಯೂ ಸಹ ಹೆಚ್ಚಿದೆ. ಈ ಹಿನ್ನೆಲೆ ಮುಂದಿನ ಶೈಕ್ಷಣಿಕ ವರ್ಷದಿಂದ ೬ ನೇ ತರಗತಿಗೆ ೫೦ ರಿಂದ ೧೦೦ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ’ಓಬವ್ವ ಆತ್ಮ ರಕ್ಷಣೆ ಕಲೆ’ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಅಂಬೇಡ್ಕರ್, ಮೊರಾರ್ಜಿ ದೇಸಾಯಿ, ಏಕಲವ್ಯ, ಕಿತ್ತೂರು ರಾಣಿ ಚೆನ್ನಮ್ಮ, ನಾರಾಯಣ ಗುರು ಹೀಗೆ ಒಟ್ಟು ೮೩೦ ವಸತಿ ಶಾಲೆಗಳಿದ್ದು, ೨ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಸತಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶ ಉತ್ತಮವಾಗಿದ್ದು, ರಾಜ್ಯದಾದ್ಯಂತ ಬೇಡಿಕೆ ಹೆಚ್ಚಿದೆ. ಆದ್ದರಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ೬ನೇ ತರಗತಿ ಪ್ರವೇಶಕ್ಕೆ ’ಎ’ ಮತ್ತು ’ಬಿ’ ವಿಭಾಗ ಮಾಡಿ ೫೦ ರಿಂದ ೧೦೦ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಮಾಡಲಾಗುವುದು ಎಂದು ಹೇಳಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲೆಮಾರಿಗಳ ಹೀಗೆ ಎಲ್ಲಾ ಬಡ ಗ್ರಾಮೀಣ ವಿದ್ಯಾರ್ಥಿಗಳು ವಸತಿ ಶಾಲೆಗೆ ಸೇರಿ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುತ್ತಿದೆ. ಯಾರೂ ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ವಸತಿ ಶಾಲೆಗಳನ್ನು ಆರಂಬಿಸಿದೆ. ಆ ನಿಟ್ಟಿನಲ್ಲಿ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತಾಗಬೇಕು ಎಂದು ಹೇಳಿದರು.
ರಾಜ್ಯದ ವಿವಿಧ ವಸತಿ ಶಾಲೆಯಲ್ಲಿ ಓದಿದ ೧೪ ವಿದ್ಯಾರ್ಥಿಗಳು ಭಾರತೀಯ ತಾಂತ್ರಿಕ ಸಂಸ್ಥೆ(ಐಐಟಿ)ಗೆ ಆಯ್ಕೆಯಾಗಿದ್ದಾರೆ. ಇದೊಂದು ವಿಶೇಷ ಎಂದರು ಅತಿಶಯೋಕ್ತಿಯಲ್ಲ. ಶೇ.೨೫ ರಷ್ಟಾದರೂ ವಿದ್ಯಾರ್ಥಿಗಳಿಗೆ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಜನೆಗೆ ಅವಕಾಶ ಮಾಡಬೇಕು ಎಂದು ಸರ್ಕಾರದ ಆಶಯವಾಗಿದ್ದು, ಆ ನಿಟ್ಟಿನಲ್ಲಿ ವಸತಿ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಿದವರಿಗೆ ಸಾಧ್ಯವಾದಷ್ಟು ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅವಕಾಶ ಮಾಡಲಾಗುವುದು. ವಸತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರುಗುತ್ತಿಗೆ ಶಿಕ್ಷಕರಿಗೆ ಸೇವಾ ಭದ್ರತೆ ನೀಡಲಾಗುವುದು. ಹಾಗೆಯೇ ಶಿಕ್ಷಕರಿಗೆ ಗೌರವಧನ ಹೆಚ್ಚಿಸಲಾಗುವುದು. ಆ ನಿಟ್ಟಿನಲ್ಲಿ ೧೮ ಕೋಟಿ ರೂ. ವೆಚ್ಚವಾಗಲಿದೆ. ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲು ಮುಂದಾಗಲಾಗಿದೆ ಎಂದರು.
ರಾಜ್ಯದಲ್ಲಿ ಇನ್ನೂ ೧.೨೦ ಲಕ್ಷ ಮಕ್ಕಳು ವಿದ್ಯಾರ್ಥಿ ನಿಲಯದಿಂದ ಹೊರಗಿದ್ದಾರೆ. ಎಲ್ಲರಿಗೂ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ಪ್ರಯತ್ನಿಸಲಾಗುವುದು. ವಿದ್ಯಾರ್ಥಿ ನಿಲಯಗಳ ಮೂಲ ಸೌಕರ್ಯಕ್ಕೆ ೧೩೫ ಕೋಟಿ ರೂ.ಬೇಕಿದ್ದು, ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ. ಸರ್ಕಾರ ಎಲ್ಲಾ ರೀತಿಯ ಆರ್ಥಿಕ ನೆರವು ನೀಡಲಿದೆ. ೫೦ ಕಡೆಗಳಲ್ಲಿ ಕನಕದಾಸರ ಹೆಸರಿನಲ್ಲಿ ವಿದ್ಯಾರ್ಥಿ ನಿಲಯ, ಹಾಗೆಯೇ ೫ ಕಡೆಗಳಲ್ಲಿ(ಮಂಗಳೂರು, ಬೆಳಗಾವಿ, ಗುಲ್ಬರ್ಗಾ, ಮೈಸೂರು, ಬೆಂಗಳೂರು) ದೀನ್ ದಯಾಳ್ ಉಪಾಧ್ಯಾಯ ವಿದ್ಯಾರ್ಥಿ ನಿಲಯದಲ್ಲಿ ಒಂದು ಸಾವಿರ ಮಕ್ಕಳಿಗೆ ಅವಕಾಶ ಕಲ್ಪಿಸಲಾಗುವುದು. ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅವಕಾಶ ಬೇಕು ಎನ್ನುವ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರವೇಶಕ್ಕೆ ಅವಕಾಶ ಒದಗಿಸಲಾಗುವುದು ಎಂದರು.
ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಓಬವ್ವ ಆತ್ಮ ರಕ್ಷಣೆ ಕಲೆ ಕಲಿಯುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಸಮಾಜದಲ್ಲಿ ಧೈರ್ಯವಾಗಿ ಬದುಕಲು ಸಾಧ್ಯ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ವಿದ್ಯಾರ್ಥಿನೀಯರು ಕರಾಟೆ ಕಲಿಯುವುದರಿಂದ ಆತ್ಮರಕ್ಷಣೆಯಿಂದ ಓಡಾಡಲು ಸಹಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಕೂಡು ಮಂಗಳೂರು ಗ್ರಾ.ಪಂ. ಅಧ್ಯಕ್ಷ ಇಂದಿರಾ ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎನ್.ಮಂಜುನಾಥ್, ವಸತಿ ಶಾಲೆಗಳ ಜಿಲ್ಲಾ ಸಮನ್ವಯಾಧಿಕಾರಿ ಲೋಕೇಶ್, ವಿವಿಧ ವಸತಿ ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ ರೆಡ್ಡಿ, ಪ್ರಕಾಶ್, ಶ್ರೀದೇವಿ, ಭಾರತಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ವಿಸ್ತರಣಾಧಿಕಾರಿಯಾದ ಚಂದ್ರಪ್ಪ, ಎಂಜಿನಿಯರ್ ಚೆನ್ನೇಸ್, ಇತರರು ಇದ್ದರು. ವಿದ್ಯಾರ್ಥಿನಿಯರು ’ಓಬವ್ವ ಆತ್ಮ ರಕ್ಷಣೆ ಕಲೆ’ ಪ್ರದರ್ಶನ ಮಾಡಿದರು.